ADVERTISEMENT

ಇಂದು ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: 3 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 15:27 IST
Last Updated 21 ಜೂನ್ 2024, 15:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ‘ಅಲರ್ಟ್’ ನೀಡಲಾದ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವೂ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಚಂಡಮಾರುತದ ಹವಾಮಾನವು ಕರಾವಳಿ ಉದ್ದಕ್ಕೂ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರವಹಿಸಬೇಕು ಎಂದು ಇಲಾಖೆ ಹೇಳಿದೆ.

ADVERTISEMENT

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಭಾನುವಾರವೂ ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ನೀಡಲಾಗಿದೆ. ಇದೇ 25ರವರೆಗೆ ಒಳನಾಡಿನ ಕರಾವಳಿ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಕದ್ರಾದಲ್ಲಿ 11 ಸೆಂ.ಮೀ. ಮಳೆ 

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉತ್ತರ ಕನ್ನಡದ ಕದ್ರಾದಲ್ಲಿ 11 ಸೆಂ.ಮೀ., ಬೆಳಗಾವಿಯ ಲೋಂಡಾದಲ್ಲಿ 10 ಸೆಂ.ಮೀ., ಉತ್ತರ ಕನ್ನಡದ ಯಲ್ಲಾಪುರದಲ್ಲಿ 8 ಸೆಂ.ಮೀ., ಶಿರಾಲಿಯಲ್ಲಿ 5 ಸೆಂ.ಮೀ. ಮಳೆಯಾಗಿದೆ. ಉಳಿದೆಡೆ ಇದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.