ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳೂ ಸೇರಿ ಪಶ್ಚಿಮಘಟ್ಟದ ಪ್ರದೇಶದಲ್ಲಿ 2015ರ ಬಳಿಕ ಆಗಿರುವ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಅರಣ್ಯ ಒತ್ತುವರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಕುರಿತು ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದೂ ಅವರು ಹೇಳಿದ್ದಾರೆ.
ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಜೀವಗಳು ಬಲಿಯಾಗಿದ್ದರೆ, ಕೇರಳದಲ್ಲಿ 250ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನ ಕಣ್ಮರೆಯಾಗಿದ್ದಾರೆ. ಈ ದುರಂತ ನಮಗೂ ಎಚ್ಚರಿಕೆ ಗಂಟೆಯಾಗಿದೆ. ಪಶ್ಚಿಮಘಟ್ಟದ ಉಳಿವು ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳನ್ನು ಕಡಿದು ಕಾಫಿ ತೋಟ, ಮನೆ, ಹೋಂ ಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.