ADVERTISEMENT

ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸ: ಜಿ.ಪರಮೇಶ್ವರ

ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 14:12 IST
Last Updated 28 ಜುಲೈ 2024, 14:12 IST
<div class="paragraphs"><p>ಮಾಂಸ ವಶಪಡಿಸಿಕೊಂಡ ಸಂದರ್ಭ</p></div>

ಮಾಂಸ ವಶಪಡಿಸಿಕೊಂಡ ಸಂದರ್ಭ

   

ಪ್ರಜಾವಾಣಿ ಚಿತ್ರ

ದಾವಣಗೆರೆ: ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದನ್ನು ಪ್ರಯೋಗಾಲಯದ ವರದಿ ದೃಢಪಡಿಸಿದೆ. ನಾಯಿ ಮಾಂಸ ಎಂಬುದಾಗಿ ದುರುದ್ದೇಶದಿಂದ ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ADVERTISEMENT

‘ವ್ಯಾಪಾರಿಯೊಬ್ಬರು ರಾಜಸ್ಥಾನದಿಂದ ಮಾಂಸವನ್ನು ರೈಲಿನಲ್ಲಿ ಕರ್ನಾಟಕಕ್ಕೆ ತಂದು ಮಾರಾಟ ಮಾಡುತ್ತಾರೆ. ಹೀಗೆ ತಂದಿರುವುದು ನಾಯಿ ಮಾಂಸ ಎಂಬುದಾಗಿ ಆಕ್ಷೇಪ ವ್ಯಕ್ತವಾಗಿದ್ದರಿಂದ ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಪ್ರಯೋಗಾಲಯದ ವರದಿಯಲ್ಲಿ ಇದು ಮೇಕೆ ಮಾಂಸ ಎಂಬುದು ಖಚಿತವಾಗಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕಾನೂನು ಬಾಹಿರ ಗಣಿಗಾರಿಕೆ ನಡೆಸಿ ರಾಜ್ಯದ ಸಂಪತ್ತು ಲೂಟಿ ಮಾಡುತ್ತಿರುವುದನ್ನು ವಿರೋಧಿಸಿ ಬಳ್ಳಾರಿ ವರೆಗೆ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆಗೆ ಮುಂದಾಗಿದೆ. ‘ಮುಡಾ’ ವಿಚಾರದಲ್ಲಿ ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ ಹಾಗೂ ಕಾನೂನು ಬಾಹಿರ ಕೆಲಸ ಆಗಿಲ್ಲ. ಜನಸಮುದಾಯಕ್ಕೆ ಸತ್ಯ ಮುಟ್ಟಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸರ್ಕಾರ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ವಿಧಿಸಬೇಕು ಎಂಬ ಕಾರಣಕ್ಕೆ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ. ಜಾರಿ ನಿರ್ದೇಶನಾಲಯ, ಸಿಬಿಐ ಕೂಡ ತನಿಖೆ ಮಾಡುತ್ತಿವೆ. ಒಂದು ವೇಳೆ ಸಚಿವರ ಖಾತೆಗೆ ಹಣ ವರ್ಗಾವಣೆ ಆಗಿದ್ದು ಖಚಿತವಾದರೆ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈ ವಿಚಾರದಲ್ಲಿ ಮೂಲಾಜು ಇಟ್ಟುಕೊಳ್ಳುವುದಿಲ್ಲ’ ಎಂದು ಹೇಳಿದರು.

'ಕೇಂದ್ರ ಸಚಿವರ ವಿಚಾರದಲ್ಲಿ ಶಿಷ್ಟಾಚಾರ ಪಾಲನೆ ಮಾಡಲು ಸರ್ಕಾರ ಸಿದ್ಧವಿದೆ. ಇದರಲ್ಲಿ ವ್ಯತ್ಯಾಸಗಳಾಗಿದ್ದರೆ ಅದು ಉದ್ದೇಶಪೂರ್ವಕವಲ್ಲ. ಕೀಳು ಮಟ್ಟದ ರಾಜಕಾರಣ ಮಾಡುವ ಅಗತ್ಯ ಕಾಂಗ್ರೆಸ್‌ಗೆ ಇಲ್ಲ'

-ಡಾ.ಜಿ.ಪರಮೇಶ್ವರ, ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.