ADVERTISEMENT

5.8 ಕೋಟಿ ಪಡಿತರ ಚೀಟಿ ರದ್ದು ಮಾಡಿದ ಕೇಂದ್ರದ ಬಗ್ಗೆ BJP ಮೌನವೇಕೆ?: MB ಪಾಟೀಲ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 15:26 IST
Last Updated 21 ನವೆಂಬರ್ 2024, 15:26 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ಬೆಂಗಳೂರು: ‘ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸುತ್ತಿರುವುದನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಕೇಂದ್ರದ ಮೋದಿ ಸರ್ಕಾರ ಡಿಜಿಟಲೀಕರಣದ ಹೆಸರಿನಲ್ಲಿ 5.80 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಬಿಜೆಪಿ ನಾಯಕರೇಕೆ ಈಗ ಗಪ್-ಚುಪ್ ಆಗಿದ್ದಾರೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದ್ದಾರೆ.

ತಮ್ಮ ‘ಎಕ್ಸ್’ ಖಾತೆಯಲ್ಲಿ ಗುರುವಾರ ಈ ವಿಷಯವನ್ನು ಬರೆದುಕೊಂಡಿರುವ ಅವರು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟ್ಯಾಗ್ ಮಾಡಿದ್ದಾರೆ.

‘ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ವಿಜಯೇಂದ್ರ, ಅಶೋಕ, ಯತ್ನಾಳ ಅವರಿಗೆ ದೆಹಲಿಗೆ ತೆರಳಿ ಪ್ರಧಾನಿ ಮನೆ ಎದುರು ಧರಣಿ ಕುಳಿತುಕೊಳ್ಳುವ ಧೈರ್ಯ ಇದೆಯೇ’ ಎಂದೂ ಅವರು ಪ್ರಶ್ನಿಸಿದ್ದಾರೆ.

ADVERTISEMENT

‘ರಾಜ್ಯ ಬಿಜೆಪಿ ಇಬ್ಭಾಗವಾಗಿದೆ. ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ ಮತ್ತು ಅವರ ತಂಡ ಪ್ರಯತ್ನಿಸುತ್ತಿದೆ. ಈಗ ಬಿಜೆಪಿಯವರು ವಿನಾ ಕಾರಣ ಪಡಿತರ ಚೀಟಿ ಹೆಸರಿನಲ್ಲಿ ಗದ್ದಲ ಸೃಷ್ಟಿಸುತ್ತಿದ್ದಾರೆ. ಬಿಪಿಎಲ್ ಪಡಿತರ ಚೀಟಿಯು ನಿಜವಾದ ಬಡವರಿಗೆ ಸಿಗಬೇಕು. ಹೀಗಾಗಿ ಶ್ರೀಮಂತರು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಬಳಿ‌ ಇರುವ ಬಿಪಿಎಲ್ ಕಾರ್ಡುಗಳನ್ನು ಸರ್ಕಾರ ರದ್ದುಪಡಿಸುತ್ತಿದೆ. ರಾಜ್ಯ ಬಿಜೆಪಿ ನಾಯಕರು ಇದರ ವಿರುದ್ಧ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.