ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ರಾಷ್ಟ್ರದ ಅತ್ಯುನ್ನತ ಗೌರವವಾದ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಸಿದ್ಧಗಂಗಾ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ 5ನೇ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿವಕುಮಾರ ಸ್ವಾಮೀಜಿ ಸಾಧನೆಗೆ ಭಾರತ ರತ್ನ ನೀಡಬೇಕಿದ್ದು, ಕೇಂದ್ರಕ್ಕೆ ಪತ್ರ ಬರೆದು ಒತ್ತಾಯ ತರಲಾಗುವುದು. ಸ್ವಾಮೀಜಿ ಹುಟ್ಟೂರು ಮಾಗಡಿ ತಾಲ್ಲೂಕಿನ ವೀರಾಪುರದಲ್ಲಿ ಅವರ ಪುತ್ಥಳಿ ನಿರ್ಮಾಣಕ್ಕೆ ಸರ್ಕಾರದ ಕಡೆಯಿಂದ ಸಹಾಯ ಮಾಡಲಾಗುವುದು ಎಂದು ಹೇಳಿದರು.
12ನೇ ಶತಮಾನದಲ್ಲೇ ಬಸವಾದಿ ಶಿವಶರಣರು ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದು, ಇಂದಿಗೂ ಅಸಮಾನತೆ, ತಾರತಮ್ಯ ಮುಂದುವರಿದಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ಬದಲಾವಣೆ ತರದೆ ಅಸಮಾನತೆ ಹೋಗಲಾಡಿಸಲು ಸಾಧ್ಯವಿಲ್ಲ. ಅದೇ ಉದ್ದೇಶ ಇಟ್ಟುಕೊಂಡು, ಸಂಕಷ್ಟದಲ್ಲಿ ಇರುವ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ, ಸಮಾಜದ ಮುಖ್ಯ ವಾಹಿನಿಗೆ ತರುವ ಸಲುವಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದಕ್ಕಾಗಿ ಈ ವರ್ಷ ₹38 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಮುಂದಿನ ವರ್ಷ ₹68 ಸಾವಿರ ಕೋಟಿ ವೆಚ್ಚ ಮಾಡಲಾಗುವುದು ಎಂದು ಅವರು ಹೇಳಿದರು.
ದಕ್ಷಿಣ ಕರ್ನಾಟಕ ಭಾಗ ಆರ್ಥಿಕವಾಗಿ ಸಾಕಷ್ಟು ಬದಲಾವಣೆ ಕಂಡಿದ್ದರೆ, ಉತ್ತರ ಕರ್ನಾಟಕ ಭಾಗದ ಜನರು ಆರ್ಥಿಕ, ಸಾಮಾಜಿಕ ಅಸಮಾನತೆ ಎದುರಿಸುತ್ತಿದ್ದಾರೆ. ನಂಜುಂಡಪ್ಪ ವರದಿ ಜಾರಿಯ ನಂತರವೂ ಅಸಮಾನತೆ ಕಾಣುತ್ತಿದ್ದೇವೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂತಹ ಜನರ ನೆರವಿಗೆ ಬರಲಿವೆ ಎಂದು ತಿಳಿಸಿದರು.
ಗೃಹ ಸಚಿವ ಜಿ.ಪರಮೇಶ್ವರ, ‘ವರ್ಗ, ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಮಾಡಲಾಗಿದೆ. ಬಸವಣ್ಣನವರು ಇಡೀ ಜಗತ್ತಿಗೆ ಆದರ್ಶ ಪುರುಷರಾಗಿದ್ದಾರೆ’ ಎಂದು ಬಣ್ಣಿಸಿದರು.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ‘ಹಿಂದೂಗಳ ಮೇಲೆ ಸತತವಾಗಿ ದಾಳಿ ಮುಂದುವರಿದಿದ್ದು, ಯಾವುದೇ ಧರ್ಮವನ್ನು ತುಷ್ಟೀಕರಿಸದೆ ಎಲ್ಲರಿಗೂ ಸೂಕ್ತ ರೀತಿಯಲ್ಲಿ ಅನುದಾನ ಹಂಚಿಕೆ ಮಾಡಬೇಕು’ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.