ADVERTISEMENT

ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್‌ ಯತ್ನ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2024, 16:21 IST
Last Updated 30 ಏಪ್ರಿಲ್ 2024, 16:21 IST
ಹಾಸನ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಲು ಕೇಂದ್ರ ಸರ್ಕಾರ ನೆರವು ನೀಡಿದೆ ಎಂದು ಆರೋಪಿಸಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ  ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದರು
ಹಾಸನ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಲು ಕೇಂದ್ರ ಸರ್ಕಾರ ನೆರವು ನೀಡಿದೆ ಎಂದು ಆರೋಪಿಸಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ  ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದರು   

ಬೆಂಗಳೂರು: ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಲು ಕೇಂದ್ರ ಸರ್ಕಾರ ನೆರವು ನೀಡಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ರಾಜ್ಯ ಘಟಕದ ಕಚೇರಿಗೆ ಮುತ್ತಿಗೆ ಹಾಕಲು ಮಂಗಳವಾರ ಯತ್ನಿಸಿದರು.

ರಾಷ್ಟ್ರೀಯ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ನೇತೃತ್ವದಲ್ಲಿ ಘೋಷಣೆ ಕೂಗುತ್ತಾ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಘಟಕದ ಕಚೇರಿ ಜಗನ್ನಾಥ ಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಮುಂದಾದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜ್ವಲ್‌ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಮೋದಿ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಶ್ರೀನಿವಾಸ್‌ ಸೇರಿದಂತೆ ಹಲವು ಮಂದಿ ಪ್ರತಿಭಟನಕಾರರನ್ನು ವಶಕ್ಕೆ ಪಡೆದು, ಕರೆದೊಯ್ದರು. ಪ್ರತಿಭಟನಕಾರರನ್ನು ಬಸ್ಸಿನಲ್ಲಿ ಕರೆದೊಯ್ಯುವಾಗ ಪೊಲೀಸರು ಮತ್ತು ಯುವ ಕಾಂಗ್ರೆಸ್‌ ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟವೂ ನಡೆಯಿತು.

ADVERTISEMENT

ಎನ್‌ಎಸ್‌ಯುಐನಿಂದಲೂ ಪ್ರತಿಭಟನೆ: ಪ್ರಜ್ವಲ್‌ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ನೇತೃತ್ವದಲ್ಲೂ ಮಂಗಳವಾರ ಪ್ರತಿಭಟನೆ ನಡೆಯಿತು.

ನಗರದ ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಪ್ರಜ್ವಲ್‌ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.