ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಅವರ ಸಂಪುಟದ ಮಾಜಿ ಸಚಿವರ ವಿರುದ್ಧ ಮತ್ತೆ ಐದು ಕೊಲೆ ಪ್ರಕರಣಗಳು ದಾಖಲಾಗಿವೆ.
ಮೀಸಲಾತಿ ವಿರೋಧಿಸಿ ದೇಶದಲ್ಲಿ ನಡೆದ ಪ್ರತಿಭಟನೆ ವೇಳೆ 5 ಜನರನ್ನು ಹತ್ಯೆಗೈದ ಆರೋಪದ ಮೇಲೆ ಹಸೀನಾ ವಿರುದ್ಧ, ಮೃತರ ಸಂಬಂಧಿಕರು ಸೋಮವಾರ ಢಾಕಾದ ವಿವಿಧ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರೊಂದಿಗೆ ಹಸೀನಾ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.
ಐವರ ಸಾವಿಗೆ ಸಂಬಂಧಿಸಿದಂತೆ ಹಸೀನಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾದರ್ ಮತ್ತು ಇತರ 339 ಮಂದಿ ವಿರುದ್ಧ ಐದು ಕೊಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಹಸೀನಾ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಸೀನಾ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದ್ದರು. ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.