ಕರಾಚಿ: ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಐವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ಭಾನುವಾರ ತಿಳಿಸಿದೆ.
ಡಿಸೆಂಬರ್ 30-31ರ ರಾತ್ರಿ ಗುಪ್ತಚರ ಮಾಹಿತಿಯ ಮೇರೆಗೆ ನಡೆದ ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಐವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಸೇನೆಯ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಮಾಧ್ಯಮ ವಿಭಾಗ ತಿಳಿಸಿದೆ.
ಭಯೋತ್ಪಾದಕರ ಅಡಗುತಾಣವನ್ನು ಸಹ ಭೇದಿಸಲಾಗಿದೆ. ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ಹೇಳಿದೆ.
ಪಾಕಿಸ್ತಾನದಲ್ಲಿ ಮುಖ್ಯವಾಗಿ ಖೈಬರ್-ಪಖ್ತುಂಖ್ವಾ ಮತ್ತು ಬಲೂಚಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಿವೆ. ಇತ್ತೀಚೆಗೆ ಖೈಬರ್ ಪಖ್ತುಂಖ್ವಾದ ಉತ್ತರ ವಜೀರಿಸ್ತಾನ ಜಿಲ್ಲೆಯ ಮೀರ್ ಅಲಿ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದರು.
ಈ ತಿಂಗಳ ಆರಂಭದಲ್ಲಿ, ಡೇರಾ ಇಸ್ಮಾಯಿಲ್ ಖಾನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಸೇರಿದಂತೆ ಒಂದೇ ದಿನದಲ್ಲಿ ಎರಡು ಪ್ರತ್ಯೇಕ ದಾಳಿಯಲ್ಲಿ 25 ಸೈನಿಕರು ಹತ್ಯೆಗೀಡಾಗಿದ್ದರು.
ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಫಾರ್ ಕಾನ್‌ಫ್ಲಿಕ್ಟ್ ಆ್ಯಂಡ್ ಸೆಕ್ಯುರಿಟಿ ಸ್ಟಡೀಸ್ (ಪಿಐಸಿಎಸ್‌ಎಸ್) ನೀಡಿದ ಅಂಕಿಅಂಶಗಳ ಪ್ರಕಾರ, 2014ರಿಂದ ಇಲ್ಲಿಯವರೆಗೆ ಈ ವರ್ಷದಲ್ಲಿಯೇ ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯಾ ದಾಳಿಗಳು ನಡೆದಿವೆ. ಅವುಗಳಲ್ಲಿ ಅರ್ಧದಷ್ಟು ದಾಳಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.