ನ್ಯೂಯಾರ್ಕ್: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ಧ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ.
ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಅನ್ವಯ, ಗೌತಮ್ ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ವಿರುದ್ಧ ಐದು ಅಂಶಗಳ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್ ಅಗರವಾಲ್ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.
‘ಆರೋಪಿಗಳಾದ ಗೌತಮ್ ಎಸ್. ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ಅವರು ಬಿಲಿಯನ್‌ಗಟ್ಟಲೆ ಡಾಲರ್ ಮೌಲ್ಯದ ಗುತ್ತಿಗೆ ಪಡೆಯಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚವನ್ನು ನೀಡುವ ಮೂಲಕ ಸಂಚು ರೂಪಿಸಿದ್ದಾರೆ. ಆ ಮೂಲಕ ಅಮೆರಿಕ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರಿಂದ ಬಂಡವಾಳ ಪಡೆಯುವ ಸಂಚು ಹೊಂದಿದ್ದರು’ ಎಂದು ಅಮೆರಿಕದ ಅಟಾರ್ನಿ ಜನರಲ್ ಬ್ರಾನ್ ಪೀಸ್ ಹೇಳಿದ್ದಾರೆ.
ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ’ ಎಂದು ಆರೋಪಿಸಲಾಗಿದೆ.
‘ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್ ಕೂಡಾ ಪ್ರಯತ್ನಿಸುತ್ತಿದೆ’ ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾರೆ.
ದೋಷಾರೋಪ ಪಟ್ಟಿಯಲ್ಲಿರುವ ಆರೋಪಗಳು ಸಾಭೀತಾಗುವವರೆಗೂ ಅವರನ್ನು ನಿರ್ದೋಷಿಗಳೆಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿರುವುದಾಗಿ ಅಮೆರಿಕದ ಅಟಾರ್ನಿ ಕಚೇರಿ ಹೇಳಿದೆ.
ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ. ಆದರೆ ಈ ಕುರಿತು ಗೌತಮ್ ಅದಾನಿ ಹಾಗೂ ಆರೋಪ ಪಟ್ಟಿಯಲ್ಲಿರುವ ಇತರರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವರದಿಯಾಗಿದೆ.
ಈ ನಡುವೆ ಅಮೆರಿಕದ ಡಾಲರ್ ಬಾಂಡ್‌ಗಳ ಮೂಲಕ ಹೂಡಿಕೆ ಆಕರ್ಷಿಸಲು ಮುಂದಾಗಿದ್ದ ಅದಾನಿ ಗ್ರೀನ್ ಎನರ್ಜಿ ಕಂಪನಿಯು ತನ್ನ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.