ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಗುರುವಾರ ತಡರಾತ್ರಿ ಆರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಕನಿಷ್ಠ 46 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕಟ್ಟಡದ ಮೊದಲ ಮಹಡಿಯಲ್ಲಿರುವ ‘ಕಾಚ್ಚಿ ಬಾಯಿ’ ರೆಸ್ಟೋರೆಂಟ್‌ನಲ್ಲಿ ಗುರುವಾರ ರಾತ್ರಿ 9.50ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ವೇಗವಾಗಿ ಇತರ ಮಹಡಿಗಳಿಗೂ ವ್ಯಾಪ್ತಿಸಿತು. ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಯಿತು ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.
ಮೃತರೂ ಸೇರಿದಂತೆ 75 ಜನರನ್ನು ಕಟ್ಟಡದಿಂದ ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದೂ ಅವರು ಮಾಹಿತಿ ನೀಡಿದರು.
ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ಸಮಂತಾ ಲಾಲ್ ಸೇನ್, ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಜತೆಗೆ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಕಿ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
‘ಪ್ರತಿ ಮಹಡಿಗಳಲ್ಲೂ ಅನಿಲ ಗ್ಯಾಸ್ ಸಿಲಿಂಡರ್‌ಗಳು ಇದ್ದವು. ಅನಿಲ ಸೋರಿಕೆಯಿಂದಲೇ ಅಗ್ನಿ ಅವಘಡ . ಅಲ್ಲದೆ, ಕಟ್ಟಡದ ಒಂದು ಕಡೆ ಮಾತ್ರ ನಿರ್ಗಮನ ದ್ವಾರವಿತ್ತು’ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಬಗ್ಗೆ ತನಿಖೆಗೆ ಐವರು ಸದಸ್ಯರ ಸಮಿತಿಯನ್ನು ರಚನೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.