ಢಾಕಾ: ಬಾಂಗ್ಲಾದೇಶದಲ್ಲಿ ವ್ಯಾಪಕ ಪ್ರತಿಭಟನೆ, ಹಿಂಸಾಚಾರದ ಬೆನ್ನಲ್ಲೇ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನ ಮಾಡಿದ ಒಂದು ದಿನದ ಬಳಿಕ ರಾಷ್ಟ್ರಪತಿ ಮೊಹಮ್ಮದ್ ಶಹಾಬುದ್ದೀನ್ ಸಂಸತ್ತನ್ನು ವಿಸರ್ಜಿಸಿದ್ದಾರೆ.
ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಮುಖಂಡರೊಂದಿಗೆ ಚರ್ಚೆ ನಡೆಸಿದ ಬಳಿಕ ಸಂಸತ್ತನ್ನು ವಿಸರ್ಜಿಸುವ ನಿರ್ಧಾರವನ್ನು ರಾಷ್ಟ್ರಪತಿ ತೆಗೆದುಕೊಂಡಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಪ್ರಕಟಣೆ ತಿಳಿಸಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.
ಬಿಎನ್‌ಪಿ ಅಧ್ಯಕ್ಷೆ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅದು ಹೇಳಿದೆ. ಇದಲ್ಲದೆ, ಜುಲೈ 1 ರಿಂದ ಆಗಸ್ಟ್ ನಡುವೆ ಬಂಧಿಸಲ್ಪಟ್ಟವರನ್ನು ಬಿಡುಗಡೆ ಮಾಡುವ ಪ್ರಕ್ರಿಯೆಯು ಪ್ರಾರಂಭವಾಗಿದೆ ಮತ್ತು ಹಲವರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅದು ಹೇಳಿದೆ.
ಸಂಸತ್ತನ್ನು ವಿಸರ್ಜಿಸುವ ರಾಷ್ಟ್ರಪತಿಗಳ ಕ್ರಮವು ಹೊಸ ಚುನಾವಣೆಗಳಿಗೆ ಎಡೆ ಮಾಡಿಕೊಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.