ಲಂಡನ್: ಬ್ರಿಟನ್‌ನ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಗೆ ನಿಲ್ಲುವ ನಿರೀಕ್ಷೆಯಿದೆ ಎಂದು ಟೈಮ್ಸ್ ವರದಿ ಮಾಡಿದೆ.
ಪ್ರಧಾನಿ ಸ್ಥಾನಕ್ಕೆ ಲಿಜ್ ಟ್ರಸ್ ಗುರುವಾರ ರಾಜೀನಾಮೆ ಘೋಷಣೆ ಮಾಡಿದ್ದರು.
‘ಅವರು (ಜಾನ್ಸನ್) ಸ್ಪರ್ಧೆಯ ಸಾಧಕ ಬಾಧಕಗಳ ಬಗ್ಗೆ ಅವಲೋಕನ ನಡೆಸುತ್ತಿದ್ದಾರೆ. ಇದು ರಾಷ್ಟ್ರೀಯ ಹಿತಾಸಕ್ತಿಯ ವಿಷಯ ಎಂದು ಅವರು ಭಾವಿಸಿದ್ದಾರೆ’ ಎಂದು ಸುದ್ದಿ ಮಾಧ್ಯಮ ಟೈಮ್ಸ್ ಪೊಲಿಟಿಕಲ್ ಎಡಿಟರ್ ಸ್ಟೀವನ್ ಸ್ವಿನ್ಫೋರ್ಡ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.
ಇನ್ನೊಂದೆಡೆ, ಭಾರತ ಮೂಲದ ರಿಷಿ ಸುನಕ್ ಅವರು ಪ್ರಧಾನಿ ಹುದ್ದೆಗೆ ಮತ್ತೊಮ್ಮೆ ಪೈಪೋಟಿ ನಡೆಸಲಿದ್ದಾರೆ ಎಂದು ವೆಸ್ಟ್‌ಮಿನ್‌ಸ್ಟರ್ ಮತ್ತು ವೈಟ್‌ಹಾಲ್‌ನಲ್ಲಿ ಊಹಾಪೋಹಗಳು ಹರಡಿವೆ. ಆದಾಗ್ಯೂ, ಅವರಿಂದ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಹೊರಬಿದ್ದಿಲ್ಲ. ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅವನತಿಯಲ್ಲಿ ಸುನಕ್ ಅವರದ್ದೂ ಪಾತ್ರವಿದೆ ಎಂಬ ಅಪಖ್ಯಾತಿಯ ಹಿನ್ನೆಲೆಯಲ್ಲಿ ಪಕ್ಷದೊಳಗೆ ಅವರಿಗೆ ಶತ್ರುಗಳು ಸೃಷ್ಟಿಯಾಗಿದ್ದಾರೆ.
ಜತೆಗೆ, ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ಹೌಸ್ ಆಫ್ ಕಾಮನ್ಸ್ ನಾಯಕ ಪೆನ್ನಿ ಮೊರ್ಡಾಂಟ್ ಹೆಸರೂ ಕೂಡ ಪ್ರಧಾನಿ ಸ್ಥಾನಕ್ಕೆ ಕೇಳಿ ಬಂದಿದೆ. ಈ ಹಿಂದೆ ನಾಯಕತ್ವಕ್ಕಾಗಿ ಸ್ಪರ್ಧೆಮಾಡಲು ವ್ಯಾಲೇಸ್ ನಿರಾಕರಿಸಿದ್ದರು. ಆದರೆ ಅವರು ಸ್ಪರ್ಧೆ ಮಾಡಿದರೆ, ಮುಂಚೂಣಿ ಅಭ್ಯರ್ಥಿಯಾಗಲಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.