ಢಾಕಾ: ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರ ಭವಿಷ್ಯವನ್ನು ನಿರ್ಧರಿಸಲು ಎಲ್ಲ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಬುಧವಾರ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ತಿಳಿಸಿದೆ.
ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಕುರಿತು ನೀಡಿದ ಹೇಳಿಕೆ ಸಲುವಾಗಿ ಶಹಾಬುದ್ದೀನ್ ರಾಜೀನಾಮೆ ನೀಡುವಂತೆ ಪ್ರತಿಭಟನೆಗಳು ನಡೆಯುತ್ತಿದ್ದು, ಅವರ ನಿವಾಸದ ಸುತ್ತಲೂ ಭದ್ರತೆ ಹೆಚ್ಚಿಸಲಾಗಿದೆ.
ಮಂಗಳವಾರ ನೂರಾರು ಪ್ರತಿಭಟನಕಾರರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮೊಹಮ್ಮದ್ ಶಹಾಬುದ್ದೀನ್ ಅವರನ್ನು ಒತ್ತಾಯಿಸಲು ಮುಂದಾಗಿದ್ದರು. ಅಧ್ಯಕ್ಷರ ಅಧಿಕೃತ ನಿವಾಸದ ಮೇಲೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು.
‘ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರನ್ನು ಅಧಿಕಾರದಿಂದ ತೆಗೆದುಹಾಕುವ ಬಗ್ಗೆ ಮಧ್ಯಂತರ ಸರ್ಕಾರವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ’ ಎಂದು ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಮಾಧ್ಯಮ ಕಾರ್ಯದರ್ಶಿ ಶಫೀಕುಲ್ ಆಲಂ ಹೇಳಿದ್ದಾರೆ ಎಂದು ‘ಡೈಲಿ ಸ್ಟಾರ್’ ಪತ್ರಿಕೆ ವರದಿ ಮಾಡಿದೆ.
ಮಾಧ್ಯಮಗಳ ವರದಿ ಪ್ರಕಾರ ಈ ವಾರ ಸಂಸತ್ತಿನಲ್ಲಿ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಶಹಾಬುದ್ದೀನ್ ಕಳೆದ ವಾರ ಬಾಂಗ್ಲಾ ಪತ್ರಿಕೆ ‘ಮನಬ್ ಜಮೀನ್’ಗೆ ನೀಡಿದ ಸಂದರ್ಶನವೊಂದರಲ್ಲಿ ಆಗಸ್ಟ್ 5ರಂದು ಪ್ರಧಾನಿ ಶೇಖ್ ಹಸೀನಾ ದೇಶ ತೊರೆಯುವ ಮೊದಲು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ತಮ್ಮ ಬಳಿ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.