ಕಾಬೂಲ್: ಪೂರ್ವ ಅಫ್ಗಾನಿಸ್ತಾನದಲ್ಲಿ ಬುಧವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 255 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.0 ದಾಖಲಾಗಿದೆ. ಭೂಕಂಪನ ಸಂಭವಿಸಿರುವ ಪಕ್ತಿಕಾ ಪ್ರಾಂತ್ಯದಲ್ಲಿ 90 ಮನೆಗಳು ನಾಶವಾಗಿವೆ. ಅನೇಕ ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪಾಕಿಸ್ತಾನ ಗಡಿಯ ಸಮೀಪವಿರುವ ಪಕ್ತಿಕಾ ಪ್ರಾಂತ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ಹೆಲಿಕಾಪ್ಟರ್‌ಗಳ ಮೂಲಕ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿರುವ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
‘ಪಕ್ತಿಕಾ ಪ್ರಾಂತ್ಯದ ನಾಲ್ಕು ಜಿಲ್ಲೆಗಳಲ್ಲಿ ತೀವ್ರವಾದ ಭೂಕಂಪನ ಸಂಭವಿಸಿದೆ. ಹತ್ತಾರು ಮನೆಗಳು ನಾಶವಾಗಿದ್ದು, ನೂರಾರು ಜನ ಮೃತಪಟ್ಟಿದ್ದಾರೆ. ದುರಂತದಲ್ಲಿ ಅನೇಕರು ಗಾಯಗೊಂಡಿದ್ದಾರೆ’ ಎಂದು ತಾಲಿಬಾನ್ ಸರ್ಕಾರದ ಉಪ ವಕ್ತಾರ ಬಿಲಾಲ್ ಕರಿಮಿ ಟ್ವೀಟ್ ಮಾಡಿದ್ದಾರೆ.
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಇತರೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.
2015ರಲ್ಲಿ ಈಶಾನ್ಯ ಅಫ್ಗಾನಿಸ್ತಾನದಲ್ಲಿ ಸಂಭವಿಸಿದ್ದ ಭೂಕಂಪನದಲ್ಲಿ 200ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು. 2002ರಲ್ಲಿ ಉತ್ತರ ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪನದಲ್ಲಿ 1 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದರು.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.