ವಾಷಿಂಗ್ಟನ್: ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಅವರ ರ‍್ಯಾಲಿಯಲ್ಲಿ ನಡೆದ ಗುಂಡಿನ ದಾಳಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ದಾಳಿ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಡೊನಾಲ್ಡ್ ಟ್ರಂಪ್ ಅವರು ಸುರಕ್ಷಿತವಾಗಿದ್ದಾರೆ ಎಂದು ಸುದ್ದಿ ತಿಳಿದು ನಿರಾಳವಾಗಿದ್ದೇನೆ. ನಾನು ಟ್ರಂಪ್ ಅವರಿಗೆ ಮತ್ತು ಅವರ ಕುಟುಂಬಸ್ಥರು ಸೇರಿದಂತೆ ರ‍್ಯಾಲಿಯಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
‘ಡೊನಾಲ್ಡ್ ಟ್ರಂಪ್ ಅವರನ್ನು ಸುರಕ್ಷಿತವಾಗಿ ನೋಡಿಕೊಂಡ ಸೀಕ್ರೆಟ್ ಸರ್ವಿಸ್ ತಂಡಕ್ಕೆ ಜೋ ಬೈಡನ್ ಮತ್ತು ಜಿಲ್ ಕೃತಜ್ಞತೆ ಸಲ್ಲಿಸುತ್ತೇವೆ. ಅಮೆರಿಕದಲ್ಲಿ ಈ ರೀತಿಯ ಹಿಂಸಾಚಾರಕ್ಕೆ ಸ್ಥಳವಿಲ್ಲ. ಘಟನೆಯನ್ನು ದೇಶದ ಜನರು ಒಗ್ಗಟ್ಟಿನಿಂದ ಖಂಡಿಸುತ್ತೇವೆ’ ಎಂದು ಹೇಳಿದ್ದಾರೆ.
ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಪರ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟ್ರಂಪ್ ಗಾಯಗೊಂಡಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಟ್ರಂಪ್ ಕಿವಿ ಮತ್ತು ಮುಖದ ಮೇಲೆ ಗಾಯವಾಗಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ತಿಳಿಯಬೇಕಿದೆ.
ಶಂಕಿತ ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ‘ಪಿಟಿಐ’ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.