ADVERTISEMENT

ಪಾಕಿಸ್ತಾನದಲ್ಲಿ ಐಇಡಿ ಸ್ಫೋಟ : 4 ಮಂದಿ ಸಾವು, 14 ಮಂದಿಗೆ ಗಾಯ

ಪಿಟಿಐ
Published 26 ಫೆಬ್ರುವರಿ 2023, 9:26 IST
Last Updated 26 ಫೆಬ್ರುವರಿ 2023, 9:26 IST
   

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಾರುಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದ ಬಾಂಬ್‌ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯಲ್ಲಿ ಮೋಟಾರ್ ಸೈಕಲ್‌ನಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿ ಸ್ಫೋಟ ನಡೆಸಲಾಗಿದೆ. ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗಲೇ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದು, ಮತ್ತೋರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.

ಭಾನುವಾರ ಬೆಳಗ್ಗೆ ಇಲ್ಲಿನ ರಖ್ನಿ ಮಾರುಕಟ್ಟೆ ಪ್ರದೇಶದಲ್ಲಿ ಮೋಟಾರ್ ಸೈಕಲ್‌ನಲ್ಲಿ ಅಳವಡಿಸಲಾಗಿದ್ದ ಐಇಡಿಯಿಂದ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬರ್ಖಾನ್ ಉಪ ಆಯುಕ್ತ ಅಬ್ದುಲ್ಲಾ ಖೋಸೊ ಡಾನ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಯಾವುದೇ ಭಯೋತ್ಪಾದಕ ಸಂಘಟನೆಗಳು ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಇತ್ತೀಚೆಗಷ್ಟೆ ಪೆಶಾವರದಲ್ಲಿನ ಬಾಂಬ್‌ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು.

ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯ ಮತ್ತು ಅಫ್ಗಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಸಾಮಾನ್ಯವಾಗಿವೆ. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಜೊತೆಗಿನ ಮಾತುಕತೆ ವಿಫಲವಾದ ಬಳಿಕ ಉಗ್ರಗಾಮಿ ಗುಂಪು ತನ್ನ ದಾಳಿಯನ್ನು ತೀವ್ರಗೊಳಿಸಿದೆ ಮತ್ತು ಬಲೂಚಿಸ್ತಾನದಲ್ಲಿ ಬಂಡುಕೋರರ ಹಿಂಸಾತ್ಮಕ ಕೃತ್ಯ ಹೆಚ್ಚಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.