ಇಸ್ಲಾಮಾಬಾದ್: ನವದೆಹಲಿಯಲ್ಲಿ ಏಪ್ರಿಲ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೋರಿ ಭಾರತವು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರಿಗೆ ಆಹ್ವಾನ ನೀಡಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.
ಎಸ್‌ಸಿಒದ ಅಧ್ಯಕ್ಷ ಸ್ಥಾನವನ್ನು ಭಾರತ ಸದ್ಯ ವಹಿಸಿದ್ದು, ಹಲವಾರು ಸಭೆಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ಏಪ್ರಿಲ್ ತಿಂಗಳಲ್ಲಿ ರಕ್ಷಣಾ ಸಚಿವರ ಸಭೆ ನಡೆಯಲಿದೆ. ಮಂಗಳವಾರ ಈ ನಿಟ್ಟಿನಲ್ಲಿ ಪಾಕ್ ವಿದೇಶಾಂಗ ಸಚಿವಾಲಯಕ್ಕೆ ಭಾರತ ಸರ್ಕಾರ ಆಹ್ವಾನ ನೀಡಿದೆ ಎಂದು ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ದೈನಿಕ ವರದಿ ಮಾಡಿದೆ.
ಆದರೆ ಭಾರತ ತಕ್ಷಣಕ್ಕೆ ಈ ವರದಿಯನ್ನು ದೃಢಪಡಿಸಿಲ್ಲ. ಮೇಯಲ್ಲಿ ಗೋವಾದಲ್ಲಿ ವಿದೇಶಾಂಗ ಸಚಿವರ ಸಭೆ ನಡೆಯಲಿದ್ದು, ಅದಕ್ಕೆ ಸಹ ಈಗಾಗಲೇ ಪಾಕಿಸ್ತಾನಕ್ಕೆ ಆಹ್ವಾನ ನೀಡಲಾಗಿದೆ ಎಂದು ಹೇಳಲಾಗಿದೆ
ಈಚೆಗೆ ನಡೆದ ಎಸ್‌ಸಿಒ ಮುಖ್ಯ ನ್ಯಾಯಮೂರ್ತಿಗಳ ಸಮಾವೇಶಕ್ಕೂ ಪಾಕಿಸ್ತಾನಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂದಿಯಲ್ ಬದಲಿಗೆ ನ್ಯಾಯಮೂರ್ತಿ ಮುನೀಬ್ ಅಖ್ತರ್ ಅವರು ವಿಡಿಯೊ ಕಾನ್‌ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.