ವಿಶ್ವಸಂಸ್ಥೆ (ಪಿಟಿಐ): ವಿಶ್ವಸಂಸ್ಥೆಯಲ್ಲಿರುವ ಭಾರತೀಯ ಮೂಲದ ಉದ್ಯೋಗಿ ಆರೋರಾ ಆಕಾಂಕ್ಷಾ (34) ಅವರು ವಿಶ್ವಸಂಸ್ಥೆಯ ಮುಂದಿನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ.
ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದಲ್ಲಿ (ಯುಎನ್‌ಡಿಪಿ) ಲೆಕ್ಕಪತ್ರ ಪರಿಶೋಧನಾ ಸಂಯೋಜಕಿಯಾಗಿರುವ ಅವರು ಈ ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ #AroraForSG ಹೆಸರಿನ ಹ್ಯಾಷ್‌ಟ್ಯಾಗ್ ಮೂಲಕ ಪ್ರಚಾರ ಆರಂಭಿಸಿದ್ದಾರೆ.
ಹಾಲಿ ಪ್ರಧಾನ ಕಾರ್ಯದರ್ಶಿಯಾಗಿರುವ 71 ವರ್ಷದ ಆಂಟೊನಿಯೊ ಗುಟೆರಸ್ ಅವರ ಅಧಿಕಾರಾವಧಿ ಈ ವರ್ಷದ ಡಿಸೆಂಬರ್‌ಗೆ ಕೊನೆಗೊಳ್ಳಲಿದೆ. ಮುಂದಿನ ಐದು ವರ್ಷಗಳ ಅವಧಿಗೂ ತಾನೇ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯಲು ಬಯಸಿರುವುದಾಗಿ ಗುಟೆರಸ್ ಕಳೆದ ತಿಂಗಳು ಹೇಳಿದ್ದರು.
‘ಕಳೆದ 75 ವರ್ಷಗಳಿಂದ ವಿಶ್ವಸಂಸ್ಥೆ ಜಾಗತಿಕವಾಗಿ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ನಿರಾಶ್ರಿತರು / ವಲಸಿಗರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಮಾನವೀಯ ನೆಲೆಯಲ್ಲಿ ನೆರವು ನೀಡಿದ್ದು ಕಡಿಮೆ. ತಂತ್ರಜ್ಞಾನ ಮತ್ತು ನಾವೀನ್ಯತೆ ವಿಚಾರದಲ್ಲೂ ಹಿಂದೆ ಬಿದ್ದಿದೆ. ನಾನು ವಿಶ್ವಸಂಸ್ಥೆಯನ್ನು ಪ್ರಗತಿಯತ್ತ ಕೊಂಡೊಯ್ಯಲು ಬದ್ಧರಾಗಿದ್ದೇನೆ. ಈ ಕಾರಣಕ್ಕಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ‘ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.