ಲಂಡನ್: ಲಂಡನ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿ ಮುಂಭಾಗದಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜ ಕೆಳಗಿಳಿಸಿ ಅಗೌರವ ತೋರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಲಂಡನ್‌ನ ಭಾರತೀಯ ರಾಯಭಾರ ಕಚೇರಿ ಮೇಲಿನ ರಾಷ್ಟ್ರಧ್ವಜವನ್ನು ಖಾಲಿಸ್ತಾನ ಬೆಂಬಲಿಗರು ಕೆಳಗಿಳಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕಟ್ಟಡದ ಮೊದಲ ಮಹಡಿಯ ಬಾಲ್ಕನಿಯಿಂದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ ಅಗೌರವ ತೋರಲಾಗಿದೆ.
ಈ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ತನಿಖೆ ಪ್ರಾರಂಭಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಲಂಡನ್ ಮೇಯರ್ ಸಾದಿಕ್ ಖಾನ್, ಭಾರತೀಯ ಹೈಕಮಿಷನ್‌ನಲ್ಲಿ ನಡೆದ ವಿಧ್ವಂಸಕ ಕೃತ್ಯವನ್ನು ಖಂಡಿಸುತ್ತೇವೆ. ಇಂತಹ ಕೃತ್ಯಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದ್ದಾರೆ.
ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಸಹ ಘಟನೆಯನ್ನು ಖಂಡಿಸಿದ್ದು, ಇದು ಅವಮಾನಕರ. ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಘಟನೆಗೆ ಕಾರಣವೇನು?:
ಹಿಂಸಾಚಾರ ಹಾಗೂ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿದ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್ ಸರ್ಕಾರವು ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕ ಅಮೃತ್ ಪಾಲ್‌ಸಿಂಗ್ ಬಂಧನಕ್ಕೆ ಕಾರ್ಯಾಚರಣೆ ಶುರುಮಾಡಿರುವುದೇ ಬ್ರಿಟನ್‌ನಲ್ಲಿನ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ತ್ರಿವರ್ಣ ಧ್ವಜ ಇಳಿಸಿದ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.