ಇಸ್ಲಾಮಾಬಾದ್: ‘ನಮ್ಮ ನೆಲದಲ್ಲಿ ಒಂದು ನಿರ್ದಿಷ್ಟ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ನಾವು 10 ನಿರ್ದಿಷ್ಟ ದಾಳಿಗಳನ್ನು ನಡೆಸುತ್ತೇವೆ’ ಎಂದು ಪಾಕಿಸ್ತಾನವು ಭಾರತಕ್ಕೆ ಎಚ್ಚರಿಕೆ ನೀಡಿದೆ.
ಸೇನೆಯ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಲಂಡನ್‌ನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ರೇಡಿಯೊ ಪಾಕಿಸ್ತಾನ ಹೇಳಿದೆ.
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಅವರೊಂದಿಗೆ ಗಫೂರ್ ಲಂಡನ್‌ಗೆ ತೆರಳಿದ್ದಾರೆ.
‘ನಿರ್ದಿಷ್ಟ ದಾಳಿಗೆ ಭಾರತ ಧೈರ್ಯ ಮಾಡಿದರೆ, ನಾವು ಇಂಥ 10 ದಾಳಿಗಳನ್ನು ನಡೆಸಿ ಉತ್ತರ ನೀಡುವ ಮೂಲಕ ನಮ್ಮ ಸಾಮರ್ಥ್ಯವನ್ನು ತೋರಿಸುತ್ತೇವೆ’ ಎಂದು ಹೇಳಿದ್ದಾರೆ.
‘ಮಹತ್ವಾಕಾಂಕ್ಷಿ ಚೀನಾ– ಪಾಕಿಸ್ತಾನ ಆರ್ಥಿಕ ಕಾರಿಡಾರ್‌ನಿಂದ (ಸಿಪಿಇಸಿ) ನಮ್ಮ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ’ ಎಂದಿರುವ ಅವರು, ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವಲ್ಲಿ ಸೇನೆ ಮುಂದಾಗಿದೆ. ಕಳೆದ ಜುಲೈನಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಪಾರದರ್ಶಕವಾಗಿ ನಡೆದಿದೆ ಎಂದು ತಿಳಿಸಿದ್ದಾರೆ.
‘ನಮ್ಮ ದೇಶದಲ್ಲಿ ಸಂಪೂರ್ಣ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಉತ್ತಮ ಬೆಳವಣಿಗೆಗಳ ಮೇಲೆ ಅಂತರರಾಷ್ಟ್ರೀಯ ಮಾಧ್ಯಮಗಳು ಬೆಳಕು ಚೆಲ್ಲಬೇಕು’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.