ವಿಲ್ಮಿಂಗ್ಟನ್ (ಅಮೆರಿಕ): ಅತ್ಯಮೂಲ್ಯವಾದ 297 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿದ ಅಮೆರಿಕಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.
ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತ ಪ್ರಧಾನಿ ಮೋದಿ ಅವರು ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ, 'ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಣೆ ವಿರುದ್ಧ ಹೋರಾಟವನ್ನು ದೃಢಗೊಳಿಸುವ ನಿಟ್ಟಿನಲ್ಲಿ ಭಾರತಕ್ಕೆ 297 ಬೆಲೆಬಾಳುವ ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಲಿರುವ ಅಮೆರಿಕ ಸರ್ಕಾರ ಮತ್ತು ಅಧ್ಯಕ್ಷ ಜೋ ಬೈಡನ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ' ಎಂದು ತಿಳಿಸಿದ್ದಾರೆ.
ಸಾಂಸ್ಕೃತಿಕ ಆಸ್ತಿಯ ಅಕ್ರಮ ಸಾಗಣೆಯನ್ನು ತಡೆಯಲು ಮತ್ತು ಪುರಾತನ ವಸ್ತುಗಳನ್ನು ಮೂಲ ದೇಶಕ್ಕೆ ಹಿಂದಿರುಗಿಸುವ ಸಲುವಾಗಿ ಭಾರತ ಹಾಗೂ ಅಮೆರಿಕ, ಜುಲೈ ತಿಂಗಳಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದವು.
ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿರುವ ನಿವಾಸದಲ್ಲಿ ಬೈಡನ್ ಆತಿಥ್ಯದಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು. ಈ ವೇಳೆ ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.