ADVERTISEMENT

ಉಕ್ರೇನ್‌–ರಷ್ಯಾ ಬಿಕ್ಕಟ್ಟಿನ ಬಗ್ಗೆ ಭಾರತದೊಂದಿಗೆ ಸಮಾಲೋಚನೆ: ಜೋ ಬೈಡನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಫೆಬ್ರುವರಿ 2022, 2:17 IST
Last Updated 25 ಫೆಬ್ರುವರಿ 2022, 2:17 IST
ನರೇಂದ್ರ ಮೋದಿ ಮತ್ತು ಜೋ ಬೈಡನ್
ನರೇಂದ್ರ ಮೋದಿ ಮತ್ತು ಜೋ ಬೈಡನ್   

ವಾಷಿಂಗ್ಟನ್: ಉಕ್ರೇನ್‌–ರಷ್ಯಾ ಬಿಕ್ಕಟ್ಟಿನ ಕುರಿತು ಭಾರತದೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ.

ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಜೋ ಬೈಡನ್ ತೀವ್ರವಾಗಿ ಖಂಡಿಸಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಸೇನಾ ಸಿಬ್ಬಂದಿ ಸೇರಿದಂತೆ 137 ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ. ರಷ್ಯಾ ಕ್ರಮವನ್ನು ಅಮೆರಿಕ, ಬ್ರಿಟನ್‌, ಯುರೋಪ್‌ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ಖಂಡಿಸಿವೆ.

ADVERTISEMENT

ಸರಣಿ ನಿರ್ಬಂಧ ಘೋಷಣೆ:ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಕ್ರಮಣಕಾರಿ ವರ್ತನೆ ತೋರುತ್ತಿದ್ದಾರೆ ಎಂದು ಜೋ ಬೈಡನ್, ರಷ್ಯಾ ವಿರುದ್ಧ ಸರಣಿ ನಿರ್ಬಂಧಗಳನ್ನು ಘೋಷಿಸಿದ್ದಾರೆ.

ರಷ್ಯಾದಿಂದ ಜರ್ಮನಿಗೆ ನೈಸರ್ಗಿಕ ಅನಿಲ ಪೂರೈಸುವ ಬಹುನಿರೀಕ್ಷಿತ ನಾರ್ಡ್ ಸ್ಟ್ರೀಮ್ 2 ಗ್ಯಾಸ್ ಪೈಪ್‌ಲೈನ್ ಯೋಜನೆ ನಿಷ್ಕ್ರಿಯಗೊಳಿಸಲಾಗಿದೆ ಎಂದು ಅಮೆರಿಕ ಘೋಷಿಸಿದೆ.

‘ನಾವು ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ವಿಇಬಿ ಮತ್ತು ಅವರ ಮಿಲಿಟರಿ ಬ್ಯಾಂಕ್‌ಗಳ ಮೇಲೆ ಪೂರ್ಣ ನಿರ್ಬಂಧಗಳನ್ನು ಜಾರಿಗೊಳಿಸುತ್ತಿದ್ದೇವೆ.ನಾವು ರಷ್ಯಾದ ಸರ್ಕಾರಕ್ಕೆ ಪಾಶ್ಚಿಮಾತ್ಯ ಹಣಕಾಸು ಸೌಲಭ್ಯವನ್ನು ಕಡಿತಗೊಳಿಸಿದ್ದೇವೆ. ಇನ್ನು ಮುಂದೆ ರಷ್ಯಾಗೆ ಪಾಶ್ಚಾತ್ಯ ದೇಶಗಳಿಂದ ಹಣಕಾಸು ನೆರವು ಸಿಗುವುದಿಲ್ಲ ಮತ್ತು ನಮ್ಮ ಮಾರುಕಟ್ಟೆಗಳಲ್ಲಿ ಅಥವಾ ಯುರೋಪಿಯನ್ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡಲು ಸಾಧ್ಯವಿಲ್ಲ’ ಎಂದು ಬುಧವಾರ ಬೈಡನ್ ಹೇಳಿದ್ದರು.

ಮೋದಿ–ಪುಟಿನ್ ದೂರವಾಣಿ ಮಾತುಕತೆ
ಉಕ್ರೇನ್ ಬಿಕ್ಕಟ್ಟು ಕುರಿತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಮಾತನಾಡಿದ್ದು, ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

‘ಯುದ್ಧವನ್ನು ತಕ್ಷಣವೇ ನಿಲ್ಲಿಸುವಂತೆ ಮೋದಿ ಅವರು ಮನವಿ ಮಾಡಿದ್ದಾರೆ. ರಾಜತಾಂತ್ರಿಕ ಮಾತುಕತೆಗಳು ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ. ರಷ್ಯಾ ಮತ್ತು ನ್ಯಾಟೊ ನಡುವಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಮ್ಮ ಹಿಂದಿನ ಹೇಳಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ’ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.