ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅನೌಪಚಾರಿಕ ಮತದಾನದಲ್ಲಿ ಭಾರತೀಯ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಮತ್ತು ಸೌತ್ ಡಕೋಟ ರಾಜ್ಯಪಾಲೆ ಕ್ರಿಸ್ಟಿ ನೋಯೆಮ್ ಅವರು ಅಗ್ರಸ್ಥಾನ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
‘ಕನ್ಸರ್ವೇಟಿವ್ ಪೊಲಿಟಿಕಲ್ ಆ್ಯಕ್ಷನ್ ಕಾನ್ಫರೆನ್ಸ್(ಸಿಪಿಎಸಿ)ನಲ್ಲಿ ನಡೆದ ಅನೌಪಚಾರಿಕ ಮತದಾನದಲ್ಲಿ ನೋಯೆಮ್ ಮತ್ತು ರಾಮಸ್ವಾಮಿ ಅವರು ಶೇ 15ರಷ್ಟು ಮತಗಳನ್ನು ಗಳಿಸಿದ್ದಾರೆ’ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ರಿಪಬ್ಲಿಕನ್ ಪಕ್ಷದಿಂದ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸಜ್ಜಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಣದಲ್ಲಿದ್ದ ಕ್ರಿಸ್ಟಿ ನೋಯೆಮ್ ಮತ್ತು ಭಾರತೀಯ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಪೈಕಿ ಒಬ್ಬರನ್ನು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಸಾಧ್ಯತೆಗಳಿವೆ.
ಉಪಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬಹುದು ಎಂಬ ಬಗ್ಗೆ ಮೊದಲ ಬಾರಿಗೆ ಕುತೂಹಲ ಮೂಡಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಚುನಾವಣಾ ಕಣದಲ್ಲಿದ್ದ ರಾಮಸ್ವಾಮಿ ಅವರು ಕಳೆದ ತಿಂಗಳು ಅಯೋವಾದಲ್ಲಿ ನಡೆದ ಆಂತರಿಕ ಮತದಾನದಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದ ಕಾರಣ ಸ್ಪರ್ಧೆಯಿಂದ ಹಿಂದೆ ಸರಿದು ಟ್ರಂಪ್ ಅವರಿಗೆ ಬೆಂಬಲ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.