ADVERTISEMENT

ಸಂಪಾದಕೀಯ | ಪಂಚಾಯಿತಿ ನೌಕರರ ಮುಷ್ಕರ: ಮಾತುಕತೆ ಮೂಲಕ ಇತ್ಯರ್ಥಪಡಿಸಿ

ಸಂಪಾದಕೀಯ
Published 7 ಅಕ್ಟೋಬರ್ 2024, 23:30 IST
Last Updated 7 ಅಕ್ಟೋಬರ್ 2024, 23:30 IST
   

ಮೂರು ಹಂತಗಳ ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತರುವ ಮೂಲಕ ಅಧಿಕಾರ ವಿಕೇಂದ್ರೀಕರಣದಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿದ ಮುಂಚೂಣಿ ರಾಜ್ಯ ಎಂಬ ಕೀರ್ತಿ ಕರ್ನಾಟಕಕ್ಕೆ ಇದೆ. 1993ರಲ್ಲಿ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಪಂಚಾಯತ್‌ ರಾಜ್‌ನ ಈ ವ್ಯವಸ್ಥೆಯು ಮೂರು ದಶಕಗಳನ್ನು ಪೂರೈಸಿದೆ. 30 ವರ್ಷಗಳ ಸಂಭ್ರಮಾಚರಣೆಯ ಜೊತೆಯಲ್ಲೇ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದಕ್ಕಾಗಿ ‘ರಾಷ್ಟ್ರೀಯ ಸ್ವರಾಜ್‌ ಸಮ್ಮೇಳನ’ ಆಯೋಜಿಸಲು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಿದ್ಧತೆ ನಡೆಸಿದೆ. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಹತ್ತು ವೃಂದಗಳ ಅಧಿಕಾರಿಗಳು, ನೌಕರರು ಮತ್ತು ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಶುಕ್ರವಾರದಿಂದ ರಾಜ್ಯದಾದ್ಯಂತ 5,598 ಗ್ರಾಮ ಪಂಚಾಯಿತಿಗಳ ಒಂದು ಲಕ್ಷಕ್ಕೂ ಹೆಚ್ಚಿನ ಅಧಿಕಾರಿಗಳು, ನೌಕರರು ಧರಣಿಯಲ್ಲಿ ತೊಡಗಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಆಡಳಿತ ಸಂಪೂರ್ಣ ಸ್ತಬ್ಧವಾಗಿದೆ. ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರ ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸುವುದು, ಬಡ್ತಿಗೆ ಸಂಬಂಧಿಸಿದ ತೊಡಕುಗಳ ನಿವಾರಣೆ, ಕರ ವಸೂಲಿ ಮಾಡುವವರು, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು ಮತ್ತು ಸ್ವಚ್ಛತಾ ಕೆಲಸದಲ್ಲಿ ತೊಡಗಿರುವವರಿಗೆ ಕಾರ್ಮಿಕರ ರಾಜ್ಯ ವಿಮೆ, ಭವಿಷ್ಯ ನಿಧಿ ಸೌಲಭ್ಯ ಕಲ್ಪಿಸುವುದು, ಆರೋಗ್ಯ ವಿಮೆ ಮೊತ್ತದ ಹೆಚ್ಚಳದಂತಹ ಹಲವು ಬೇಡಿಕೆಗಳನ್ನು ನೌಕರರು ಮುಂದಿಟ್ಟಿದ್ದಾರೆ. ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸುವುದು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಬಿ ಗುಂಪಿನ ಹುದ್ದೆಗಳನ್ನಾಗಿ ಉನ್ನತೀಕರಿಸುವುದು ಸೇರಿದಂತೆ ಕೆಲವು ಬೇಡಿಕೆಗಳು ದೀರ್ಘ ಕಾಲದಿಂದಲೂ ಇವೆ. ಅವುಗಳನ್ನು ಇತ್ಯರ್ಥಪಡಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಹಿಂದೆ ಭರವಸೆಯನ್ನೂ ನೀಡಿದ್ದರು.

ಹೋರಾಟದ ಜೊತೆ ಕೈಜೋಡಿಸಿರುವ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟವು ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯ್ದೆ–1993’ರ ಅನ್ವಯ ಗ್ರಾಮ ಪಂಚಾಯಿತಿಗಳು ಸ್ಥಳೀಯ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ಜವಾಬ್ದಾರಿ ಮತ್ತು ಅಧಿಕಾರವನ್ನು ಹಂಚಿಕೆ ಮಾಡುವಂತೆ ಆಗ್ರಹಿಸಿದೆ. ಗ್ರಾಮ ಪಂಚಾಯಿತಿಗಳನ್ನು ಸ್ವಾಯತ್ತ ಸ್ಥಳೀಯ ಸರ್ಕಾರಗಳನ್ನಾಗಿ ಪರಿವರ್ತಿಸಬೇಕು ಎಂಬುದು ಗ್ರಾಮ ಪಂಚಾಯಿತಿ ಸದಸ್ಯರ ಪ್ರಮುಖ ಬೇಡಿಕೆ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಗಳಿಗೆ ಬಲ ತುಂಬುವುದು, ಗ್ರಾಮ ಪಂಚಾಯಿತಿಗಳ ಸ್ಥಾಯಿ ಸಮಿತಿಗಳನ್ನು ಸಕ್ರಿಯಗೊಳಿಸುವುದು, ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳನ್ನು ರಾಜ್ಯ ಶಿಷ್ಟಾಚಾರದ ವ್ಯಾಪ್ತಿಗೆ ತರುವುದು ಹಾಗೂ ಅವರಿಗೆ ಕೇರಳ ಮಾದರಿಯಲ್ಲಿ ಗೌರವಧನ ಮತ್ತು ಸೌಲಭ್ಯಗಳನ್ನು ನೀಡಬೇಕೆಂಬ ಬೇಡಿಕೆಗಳೂ ಇವೆ. ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಚುನಾಯಿತ ಸದಸ್ಯರು ಒಗ್ಗೂಡಿ ಮುಷ್ಕರ ಆರಂಭಿಸಿರುವುದು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ತೀವ್ರತೆಯನ್ನು ತೆರೆದಿಟ್ಟಿದೆ.

ADVERTISEMENT

ಮುಷ್ಕರ ಆರಂಭಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಹಲವು ದಿನಗಳ ಹಿಂದೆಯೇ ಪ್ರಕಟಿಸಿತ್ತು. ಆದರೆ, ಹೋರಾಟದ ನೇತೃತ್ವ ವಹಿಸಿರುವವರ ಜೊತೆ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನವನ್ನು ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಮಾಡಲಿಲ್ಲ. ನಾಲ್ಕು ದಿನಗಳಿಂದ ನಡೆಯುತ್ತಿರುವ ಮುಷ್ಕರದಿಂದ ರಾಜ್ಯದ ಗ್ರಾಮೀಣ ಪ್ರದೇಶಗಳ ಸಾಮಾನ್ಯ ಜನರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೆಲಸಗಳು ಸಂಪೂರ್ಣ ಸ್ಥಗಿತವಾಗಿವೆ. ಇ–ಸ್ವತ್ತು ಸೇರಿದಂತೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಿತರಿಸುವ ಪ್ರಕ್ರಿಯೆ ಸ್ಥಗಿತಗೊಂಡಿರುವುದರಿಂದ ಗ್ರಾಮ ಪಂಚಾಯಿತಿಗಳ ಆದಾಯಕ್ಕೂ ಕತ್ತರಿಬಿದ್ದಿದೆ. ಕುಡಿಯುವ ನೀರು ಪೂರೈಕೆ, ಘನ ತ್ಯಾಜ್ಯ ವಿಲೇವಾರಿಗೂ ತೊಡಕಾಗಿದೆ. ಗ್ರಾಮ ಪಂಚಾಯಿತಿಗಳ ಆಡಳಿತ ವ್ಯವಸ್ಥೆಯು ಸದಾ ಕ್ರಿಯಾಶೀಲವಾಗಿ ಇರುವಂತೆ ನೋಡಿಕೊಳ್ಳಬೇಕಾದುದು ರಾಜ್ಯ ಸರ್ಕಾರದ ಜವಾಬ್ದಾರಿ. ಮುಷ್ಕರ ನಿರತರ ಜೊತೆ ಮಾತುಕತೆ ನಡೆಸಿ, ಅವರ ಮನವೊಲಿಸಿ ಗ್ರಾಮ ಪಂಚಾಯಿತಿಗಳ ಆಡಳಿತವನ್ನು ಹಳಿಗೆ ತರಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರವು ಹಟಮಾರಿ ಧೋರಣೆ ತಳೆಯುವುದು ಸರಿಯಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರೂ ಸೇರಿದಂತೆ ಸರ್ಕಾರದ ಪ್ರಮುಖರು ತಕ್ಷಣ ಮಧ್ಯಪ್ರವೇಶಿಸಿ ಮುಷ್ಕರ ನಿರತರ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿ, ಸಾಧ್ಯತೆಗಳ ಅನುಸಾರ ಸ್ಪಂದಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.