ಲಂಡನ್: ಆಸ್ಟ್ರೇಲಿಯಾದ ಬಲಗೈ ಬ್ಯಾಟರ್ ಸ್ಟೀವ್ ಸ್ಮಿತ್ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 32ನೇ ಶತಕದ ಸಾಧನೆ ಮಾಡಿದ್ದಾರೆ.
ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಸ್ಟ್ರೇಲಿಯಾದ ಬ್ಯಾಟರ್‌ಗಳ ಪೈಕಿ ಮಾಜಿ ನಾಯಕ ಸ್ಟೀವ್ ವ್ಹಾ ದಾಖಲೆಯನ್ನು ಸರಿಗಟ್ಟಿದ್ದು, ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.
ಆಸ್ಟ್ರೇಲಿಯಾದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ದಾಖಲೆ ರಿಕಿ ಪಾಂಟಿಂಗ್ (41) ಹೆಸರಲ್ಲಿದೆ.
ಒಟ್ಟಾರೆ ಪಟ್ಟಿಯಲ್ಲಿ ಸ್ಮಿತ್ 11ನೇ ಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ದಿಗ್ಗಜ ಸಚಿನ್ ತೆಂಡೂಲ್ಕರ್ 51 ಶತಕದೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಷಸ್ ಟೆಸ್ಟ್ ಸರಣಿಯ ಎರಡನೇ ದಿನದಾಟದಲ್ಲಿ ಸ್ಮಿತ್ ಸ್ಮರಣೀಯ ಶತಕದ ಸಾಧನೆ ಮಾಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡನೇ ಅತಿ ವೇಗದಲ್ಲಿ 9,000 ರನ್ ಗಳಿಸಿದ ಬ್ಯಾಟರ್ ಎಂಬ ಖ್ಯಾತಿಗೂ ಸ್ಮಿತ್ ಪಾತ್ರರಾಗಿದ್ದಾರೆ. 174ನೇ ಇನಿಂಗ್ಸ್‌ನಲ್ಲಿ (99ನೇ ಟೆಸ್ಟ್) ಸ್ಮಿತ್ ಈ ಸಾಧನೆ ಮಾಡಿದ್ದಾರೆ.
ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದಲ್ಲಿ 9,000 ರನ್ ಗಳಿಸಿದ ದಾಖಲೆ (172 ಇನಿಂಗ್ಸ್) ಹೊಂದಿದ್ದಾರೆ.
ಸ್ಮಿತ್ ಶತಕದ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 416 ರನ್ ಪೇರಿಸಿತು. 184 ಎಸೆತಗಳನ್ನು ಎದುರಿಸಿದ ಸ್ಮಿತ್ 110 ರನ್ (15 ಬೌಂಡರಿ) ಗಳಿಸಿ ಔಟ್ ಆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.