ಬೆಂಗಳೂರು: ಹ್ಯಾಟ್ರಿಕ್ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡದವರು ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಶನಿವಾರ ಬಾಂಗ್ಲಾದೇಶದ ಸವಾಲು ಎದುರಿಸಲಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
ಈ ಹಿಂದೆ ನಡೆದ ಎರಡೂ ಆವೃತ್ತಿಗಳಲ್ಲಿ ಭಾರತ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿತ್ತು. 2012ರ ಟೂರ್ನಿಯ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು 29 ರನ್‌ಗಳಿಂದ ಮಣಿಸಿತ್ತು. 2017ರಲ್ಲಿ ನಡೆದ ಎರಡನೇ ಆವೃತ್ತಿಯ ಪ್ರಶಸ್ತಿ ಸುತ್ತಿನ ಸೆಣಸಾಟದಲ್ಲಿ ಪಾಕಿಸ್ತಾನದ ವಿರುದ್ಧವೇ ಒಂಬತ್ತು ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಇವೆರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು.
ಈ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ ತಂಡವು 207 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲುಣಿಸಿತ್ತು. ನಾಲ್ಕರ ಘಟ್ಟದ ಮತ್ತೊಂದು ಪಂದ್ಯದಲ್ಲಿ ಬಾಂಗ್ಲಾ ತಂಡವು 64 ರನ್‌ಗಳಿಂದ ಶ್ರೀಲಂಕಾ ತಂಡದ ಸವಾಲು ಮೀರಿತ್ತು.
ಭಾರತ ತಂಡದ ನಾಯಕ ಅಜಯ್‌ಕುಮಾರ್ ರೆಡ್ಡಿ, ಕನ್ನಡಿಗರಾದ ಸುನಿಲ್ ರಮೇಶ್, ಪ್ರಕಾಶ್ ಜಯರಾಮಯ್ಯ ಉತ್ತಮ ಲಯದಲ್ಲಿದ್ದು ಫೈನಲ್‌ನಲ್ಲಿ ಮಿಂಚುವ ನಿರೀಕ್ಷೆಯಿದೆ.ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿರುವ ಬಾಂಗ್ಲಾ ಕೂಡ ಗೆಲುವಿನ ನಿರೀಕ್ಷೆಯಲ್ಲಿದೆ. ಸಲ್ಮಾನ್ ಮತ್ತು ಮೊಹಮ್ಮದ್ ಆಶಿಕುರ್ ರೆಹಮಾನ್ ಆ ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ.
ಪಂದ್ಯ ಆರಂಭ: ಬೆಳಿಗ್ಗೆ 10.30
ನೇರ ಪ್ರಸಾರ: ಡಿಡಿ ಸ್ಪೋರ್ಟ್ಸ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.