ಬೆಂಗಳೂರು: ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆಯೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ರಾಯಲ್ ಚಾಲಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸುವ ಮೂಲಕ ಗಮನ ಸೆಳೆದಿದ್ದಾರೆ.
ಮಗಳು ಐಶ್ವರ್ಯಾ, ಮಗನೊಂದಿಗೆ ಪಂದ್ಯ ವೀಕ್ಷಿಸುತ್ತಿರುವ ಫೋಟೊಗಳನ್ನು ಡಿಕೆಶಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
‘ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಿದೆ. ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ’ ಎಂದು ಟ್ವೀಟ್ ಮಾಡಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ವಿರಾಟ್ ಕೊಹ್ಲಿ ಅವರ ದಾಖಲೆಯ ಏಳನೇ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 19.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.
ಈ ಪಂದ್ಯದಲ್ಲಿ ಕೊಹ್ಲಿ 61 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್ ಸಮೇತ 101 ರನ್ ಗಳಿಸಿದರೆ, ಎದುರಾಳಿ ತಂಡದ ಯುವತಾರೆ ಶುಭಮನ್ ಗಿಲ್ 52 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್ ಸಹಿತ 104 ರನ್ ಗಳಿಸಿ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟರು.
ಈ ಸೋಲಿನೊಂದಿಗೆ ಆರ್‌ಸಿಬಿ ತಂಡವು ಪ್ಲೇ ಆಫ್ ತಲುಪುವ ಅವಕಾಶ ಕಳೆದುಕೊಂಡಿತು. ಕಳೆದ ಮೂರು ಆವೃತ್ತಿಗಳಲ್ಲಿಯೂ ಬೆಂಗಳೂರು ಬಳಗವು ನಾಲ್ಕರ ಹಂತ ಪ್ರವೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.