ನವದೆಹಲಿ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಎಲ್ಲ ಪಕ್ಷಗಳ ನಡುವೆ ಸೌಹಾರ್ದಯುತ ಪರಿಹಾರ ದೊರೆಯುವುದು ಖಚಿತ ಎಂದು ತಿಳಿಸಿದ್ದಾರೆ.
ಕೇಂದ್ರ ಕೃಷಿ ಕಾಯ್ದೆ ಹಾಗೂ ರೈತರ ಪ್ರತಿಭಟನೆ ಸಂಬಂಧ ಭಾರತೀಯ ಆಂತರಿಕ ವಿಷಯಗಳಲ್ಲಿ ವಿದೇಶಿ ಗಣ್ಯ ವ್ಯಕ್ತಿಗಳು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರತದ ತಾರೆಗಳಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಭಿನ್ನಮತಗಳ ಸಂದರ್ಭದಲ್ಲಿ ಒಗ್ಗಟ್ಟಿನಿಂದ ಇರಬೇಕೆಂದು ಮನವಿ ಮಾಡಿರುವ ವಿರಾಟ್ ಕೊಹ್ಲಿ, ರೈತರು ನಮ್ಮ ದೇಶದ ಅವಿಭಾಜ್ಯ ಅಂಗ ಎಂದು ಹೇಳಿದರು.
ಭಿನ್ನಭಿಪ್ರಾಯಗಳ ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರೋಣ. ರೈತರು ನಮ್ಮ ದೇಶದ ಅವಿಭಾಜ್ಯ ಅಂಗ. ಶಾಂತಿ ನೆಲೆಸಲು ಹಾಗೂ ಒಗ್ಗಟ್ಟಾಗಿ ಎಲ್ಲರೂ ಮುಂದುವರಿಯಲು ಎಲ್ಲ ಪಕ್ಷಗಳ ನಡುವೆ ಸೌಹಾರ್ದಯುತ ಪರಿಹಾರ ಸಿಗಲಿದೆ ಎಂಬುದರಲ್ಲಿ ನನಗೆ ಖಾತ್ರಿಯಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದರು.
ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಎಲ್ಲರೂ ಒಗ್ಗಟ್ಟಾಗಿ ಇದ್ದುಕೊಂಡು ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ನಾವು ಒಂದಾಗಿ ನಿಂತರೆ ಪರಿಹರಿಸಲಾಗದ ಯಾವುದೇ ಸಮಸ್ಯೆ ಇಲ್ಲ. ನಾವು ಒಂದಾಗಿ ಇರೋಣ ಮತ್ತು ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸೋಣ ಎಂದು ರಹಾನೆ ಟ್ವೀಟ್ ಮಾಡಿದರು.
ಭಾರತದ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ದೇಶಕ್ಕಿದೆ ಎಂದು ಮಾಜಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.
ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ ಎಂದು ಅನಿಲ್ ಕುಂಬ್ಳೆ ತಿಳಿಸಿದ್ದಾರೆ.
ಈ ಮೊದಲು ದೇಶದ ಸಾರ್ವಭೌಮತ್ವ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೇಳಿಕೆ ನೀಡಿದ್ದರು.
ಭಾರತದ ಸಾರ್ವಭೌಮತ್ವದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲಾಗದು. ವಿದೇಶಿ ಶಕ್ತಿಗಳು ಪ್ರೇಕ್ಷಕರಾಗಬಹುದೇ ವಿನಹ ದೇಶದ ಒಳಗಿನ ವಿಚಾರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಭಾರತ ಏನು ಎಂಬುದು ಮತ್ತು ಭಾರತಕ್ಕೆ ಏನು ಬೇಕು ಎಂಬುದನ್ನು ನಿರ್ಧರಿಸಲು ಭಾರತೀಯರಿಗೆ ಗೊತ್ತಿದೆ. ಒಂದು ದೇಶವಾಗಿ ನಾವು ಒಗ್ಗಟ್ಟಿನಿಂದಿರೋಣ ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದರು.
ಬಾಲಿವುಡ್ ತಾರೆಗಳಾದ ಅಕ್ಷಯ್ ಕುಮಾರ್, ಅಜಯ್ ದೇವಗನ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಭಾರತೀಯ ಆಂತರಿಕ ವಿಷಯದಲ್ಲಿ ವಿದೇಶಿಯರು ಮೂಗು ತೂರಿಸುತ್ತಿರುವುದರ ವಿರುದ್ಧ ಧ್ವನಿ ಎತ್ತಿದ್ದಾರೆ.
ಅಂತರ ರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಸೇರಿದಂತೆ ವಿದೇಶಿ ಪ್ರಮುಖರು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಹಾಗೂ ಕೃಷಿ ಕಾಯ್ದೆಗಳ ಬಗ್ಗೆ ಟ್ವೀಟ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.