ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತಿ ಹೆಚ್ಚು ಮೇಡನ್ ಓವರ್ (ಎರಡು) ಎಸೆದಿರುವ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್ ಪಟೇಲ್ ಸರಿಗಟ್ಟಿದ್ದಾರೆ.
ತಮ್ಮದೇ ತಂಡದ ಸಹ ಆಟಗಾರ ಮೊಹಮ್ಮದ್ ಸಿರಾಜ್ ದಾಖಲೆಯನ್ನು ಸರಿಗಟ್ಟಿರುವ ಹರ್ಷಲ್, ಈ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿದ್ದಾರೆ.
ಬುಧವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಲ್, ಸತತ ಎರಡು ಮೇಡನ್ ಓವರ್ ಎಸೆದಿದ್ದರು. ಅಲ್ಲದೆ ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 11 ರನ್ ನೀಡಿ ಎರಡು ವಿಕೆಟ್ ಕಬಳಿಸಿದ್ದರು.
ಕೆಕೆಆರ್ ತಂಡದ ಸ್ಫೋಟಕ ಬ್ಯಾಟರ್ ಆ್ಯಂಡ್ರೆ ರಸೆಲ್ ವಿಕೆಟ್ ಪಡೆಯುವ ಮೂಲಕ ಪಂದ್ಯಕ್ಕೆ ತಿರುವು ನೀಡಿದ್ದರು.
ಈ ಹಿಂದೆ 2020ರಲ್ಲಿ ಅಬುಧಾಬಿಯಲ್ಲಿ ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಪರ ಸಿರಾಜ್ ಎರಡು ಮೇಡನ್ ಓವರ್ ಎಸೆದಿದ್ದರು. ಅಂದು ಸಿರಾಜ್, ಕೇವಲ ಎಂಟು ರನ್ ನೀಡಿ ಮೂರು ವಿಕೆಟ್ ಕಬಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.