ಆಕ್ಲೆಂಡ್: ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನೂತನ ದಾಖಲೆಗಳನ್ನು ಬರೆಯುತ್ತಲೇ ಸಾಗುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗಿ ಜೂಲನ್ ಗೋಸ್ವಾಮಿ, ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 200 ಪಂದ್ಯಗಳನ್ನು ಆಡಿದ ಕೀರ್ತಿಗೆ ಭಾಜನರಾಗಿದ್ದಾರೆ.
ಈ ಮೂಲಕ ಭಾರತದ ನಾಯಕಿ ಮಿಥಾಲಿ ರಾಜ್ ಬಳಿಕ ಈ ಸಾಧನೆ ಮಾಡಿದ ವಿಶ್ವದ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಕ್ಲೆಂಡ್‌ನಲ್ಲಿ ಶನಿವಾರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಜೂಲನ್ ಈ ಸ್ಮರಣೀಯ ಮೈಲಿಗಲ್ಲನ್ನು ತಲುಪಿದರು.
ಇನ್ನೊಂದೆಡೆ ಮಿಥಾಲಿ 230ನೇ ಪಂದ್ಯವನ್ನು ಆಡುತ್ತಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ನ ಮಾಜಿ ಆಟಗಾರ್ತಿ ಚಾರ್ಲೆಟ್ ಎಡ್ವರ್ಡ್ಸ್ 191 ಏಕದಿನ ಪಂದ್ಯಗಳಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಿದ್ದರು. ಇನ್ನು ಸಕ್ರಿಯ ಆಟಗಾರ್ತಿಯರ ಪೈಕಿ ದಕ್ಷಿಣ ಆಫ್ರಿಕಾದ ಮಿಗ್ನನ್ ಡು ಫ್ರೀಜ್ 150 ಪಂದ್ಯಗಳನ್ನು ಆಡಿದ್ದಾರೆ.
ಇದನ್ನೂ ಓದಿ:ICC Womens World Cup: ಏಕದಿನ ಕ್ರಿಕೆಟ್‌ನಲ್ಲಿ ಜೂಲನ್ 250 ವಿಕೆಟ್ ದಾಖಲೆ
ಕೆಲವು ದಿನಗಳ ಹಿಂದೆಯಷ್ಟೇ ಜೂಲನ್, ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 250 ವಿಕೆಟ್ ಗಳಿಸಿದ ವಿಶ್ವದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು. ಹಾಗೆಯೇ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ದಾಖಲೆಯೂ ಅವರ ಹೆಸರಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.