ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ಶುಕ್ರವಾರದಿಂದ ಆರಂಭವಾಗಬೇಕಾಗಿದ್ದ ಅಂತಿಮ ಟೆಸ್ಟ್ ಪಂದ್ಯವನ್ನು ಕೋವಿಡ್ ಭೀತಿಯಿಂದಾಗಿ ರದ್ದುಗೊಳಿಸಲಾಗಿದೆ.
ಈ ಕುರಿತು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಪ್ರಕಟಣೆಯಲ್ಲಿ ತಿಳಿಸಿದೆ.
ಬಿಸಿಸಿಐ ಜೊತೆಗಿನ ದೀರ್ಘ ಸಮಾಲೋಚನೆಯ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವು ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಶುಕ್ರವಾರದಂದು ಆರಂಭವಾಗಬೇಕಿತ್ತು.
ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಭಾರತದಿಂದ ತಂಡವನ್ನು ಕಣಕ್ಕಿಳಿಸಲು ಸಾಧ್ಯವಾಗುತ್ತಿಲ್ಲ ಎಂದು ಇಸಿಬಿ ಹೇಳಿದೆ.
ಗುರುವಾರ ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಭಾರತ ತಂಡದ ಆಟಗಾರರವರದಿಯು ನೆಗೆಟಿವ್ ಬಂದಿತ್ತು. ಆದರೂ ಭಾರತ ಕ್ಯಾಂಪ್‌ನಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಭೀತಿ ಆವರಿಸಿದೆ. ಈಗಾಗಲೇ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಹಾಗೂ ಜೂನಿಯರ್ ಫಿಸಿಯೊ ಪ್ರತ್ಯೇಕವಾಸದಲ್ಲಿದ್ದಾರೆ.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1ರ ಅಂತರದ ಮುನ್ನಡೆ ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.