ದುಬೈ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ವರ್ಷಾಂತ್ಯದಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡದಿಂದ ಬಲಗೈ ಬ್ಯಾಟರ್ ಹನುಮ ವಿಹಾರಿ ಅವರನ್ನು ಕೈಬಿಡಲಾಗಿದೆ.
ಇದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸುವಲ್ಲಿ ಹನುಮ ವಿಹಾರಿ ಮಹತ್ವದ ಪಾತ್ರ ವಹಿಸಿದ್ದರು.
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ 'ಎ' ತಂಡದ ಸರಣಿಯಲ್ಲಿ ವಿಹಾರಿ ಭಾಗವಹಿಸಲಿದ್ದಾರೆ. ಅಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರ ಪ್ರದರ್ಶನದ ಮೇಲೆ ನಿಗಾ ವಹಿಸಲಾಗುವುದು ಎಂದು ಬಿಸಿಸಿಐನಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಟೆಸ್ಟ್ ತಂಡವನ್ನು ಆಯ್ಕೆ ಮಾಡುವಾಗ ವಿಹಾರಿ ಅವರ ಈಗಿನ ಪಾರ್ಮ್ ಅನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂಬುದು ತಿಳಿದು ಬಂದಿದೆ. ವಾರ್ವಿಕ್‌ಶೈರ್ ಕೌಂಟಿ ತಂಡದ ಪರ (32, 52, 8, 0, 24, 43*) ಹಾಗೂ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (26, 7, 57, 4) ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದ್ದರು.
ಏತನ್ಮಧ್ಯೆ ಮೊದಲ ಟೆಸ್ಟ್ ಪಂದ್ಯದಿಂದ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿಯನ್ನು ನೀಡಲಾಗಿದೆ. ವಿರಾಟ್ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಅಂತಿಮ ಟೆಸ್ಟ್ ಪಂದ್ಯದ ವೇಳೆ ವಿರಾಟ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ರೋಹಿತ್ ಶರ್ಮಾ, ರಿಷಭ್ ಪಂತ್, ಜಸ್‌ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಅವರಿಗೂ ವಿಶ್ರಾಂತಿ ಸೂಚಿಸಲಾಗಿದೆ.
ನ್ಯೂಜಿಲೆಂಡ್ ಟೆಸ್ಟ್ ಸರಣಿಗಾಗಿ ಭಾರತ ತಂಡ: ಅಜಿಂಕ್ಯ ರಹಾನೆ (ನಾಯಕ), ಕೆ.ಎಲ್. ರಾಹುಲ್, ಮಯಂಕ್ ಅಗರವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೆ.ಎಸ್. ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ.
* ಅಂತಿಮ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಟೆಸ್ಟ್ ಸರಣಿ ವೇಳಾಪಟ್ಟಿ:
ಮೊದಲ ಟೆಸ್ಟ್: ನ.25ರಿಂದ 29ರ ವರೆಗೆ, ಕಾನ್ಪುರ
ದ್ವಿತೀಯ ಟೆಸ್ಟ್: ಡಿ.3ರಿಂದ 7ರ ವರೆಗೆ, ಮುಂಬೈ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.