ಬೆಂಗಳೂರು: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಮುಂಬರುವ ಟ್ವೆಂಟಿ-20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಉದಯೋನ್ಮುಖ ಎಡಗೈ ಬ್ಯಾಟರ್ ರಿಂಕು ಸಿಂಗ್ ಅವರನ್ನು ಆಯ್ಕೆಗೆ ಪರಿಗಣಿಸದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಅಭಿಮಾನಿಗಳು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಹೊರತಾಗಿಯೂ ಕೋಲ್ಕತ್ತ ನೈಟ್ ರೈಡರ್ಸ್ ಆಟಗಾರನನ್ನು ಕಡೆಗಣಿಸಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್, ರಿಂಕು ಸಿಂಗ್ ಅವರ ಸಮಯ ಬಂದೇ ಬರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಮಗದೊಂದು ಟ್ವೀಟ್‌ನಲ್ಲಿ ರಿಂಕು ಅವರಿಗೆ ತಂಡದಲ್ಲಿ ಸ್ಥಾನ ಸಿಗದಿರುವುದರ ಬಗ್ಗೆ ವೀಕ್ಷಕ ವಿವರಣೆಗಾರ ಹರ್ಷ ಬೋಗ್ಲೆ ಅವಲೋಕನ ಮಾಡಿದ್ದಾರೆ. ಮುಂಬೈನ ಯುವ ಬ್ಯಾಟರ್ ತಿಲಕ್ ವರ್ಮಾ ಅವರನ್ನು ರಿಂಕು ಬದಲು ನೇರವಾಗಿಯೇ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಇದೊಂದು ಕಠಿಣ ಆಯ್ಕೆ. ಏಕೆಂದರೆ ಫಿನಿಶರ್ ಸ್ಥಾನಕ್ಕೆ ರಿಂಕು ಆಯ್ಕೆಯ ಸನಿಹದಲ್ಲಿದ್ದರು ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಕೆಕೆಆರ್‌ಗೆ ಹಲವು ಸ್ಮರಣೀಯ ಗೆಲುವು ಒದಗಿಸಿಕೊಟ್ಟಿರುವ ರಿಂಕು, 14 ಪಂದ್ಯಗಳಲ್ಲಿ 59.25ರ ಸರಾಸರಿಯಲ್ಲಿ ಒಟ್ಟು 474 ರನ್ ಪೇರಿಸಿದ್ದರು. 149.52 ಸ್ಟ್ರೇಕ್‌ರೇಟ್ ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆದಿದ್ದರು. ಟೂರ್ನಿಯಲ್ಲಿ ರಿಂಕು ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದು, 29 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಗರಿಷ್ಠ ಮೊತ್ತ 67*.
ಟೆಸ್ಟ್ ಹಾಗೂ ಏಕದಿನ ಸರಣಿಗಳ ಬಳಿಕ ವಿಂಡೀಸ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್‌ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯಿ, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಆವೇಶ್ ಖಾನ್, ಮುಕೇಶ್ ಕುಮಾರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.