ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿರುವ ಮೂಲಕ ಗಮನ ಸೆಳೆದಿದ್ದಾರೆ.
ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಇಂಗ್ಲೆಂಡ್ ವಿರುದ್ಧ ಎರಡನೇ ಟಿ–20 ಪಂದ್ಯಕ್ಕೂ ಮುನ್ನ ಧೋನಿ ಅವರು ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಧೋನಿ ಡ್ರೆಸ್ಸಿಂಗ್ ರೂಮ್ ಭೇಟಿ ನೀಡಿರುವ ಫೋಟೊಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಎದುರು ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 170 ರನ್ ಗಳಿಸಿತ್ತು.
171 ರನ್‌ಗಳ ಸವಾಲಿನ ಮೊತ್ತ ಬೆನ್ನತ್ತಿದ್ದ ಇಂಗ್ಲೆಂಡ್ ಆರಂಭಿಕ ಆಘಾತ ಎದುರಿಸಿತು. ಇನಿಂಗ್ಸ್‌ನ ಮೊದಲ ಎಸೆತದಲ್ಲಿಯೇ ಜೇಸನ್ ರಾಯ್ ವಿಕೆಟ್ ಗಳಿಸಿದ ಭುವಿ, ಮೂರನೇ ಓವರ್‌ನಲ್ಲಿ ಜೋಸ್ ಬಟ್ಲರ್‌ಗೂ ಡಗೌಟ್ ಹಾದಿ ತೋರಿಸಿದರು.
ಇದರೊಂದಿಗೆ 17 ಓವರ್‌ಗಳಲ್ಲಿ 121 ರನ್‌ಗಳಿಗೆ ಆಲೌಟ್ ಆಗಲು ಭುವನೇಶ್ವರ್ ಕುಮಾರ್ (15ಕ್ಕೆ3) ಕಾರಣರಾದರು. 49 ರನ್‌ಗಳಿಂದ ಗೆದ್ದ, ರೋಹಿತ್ ಬಳಗವು ಮೂರು ಪಂದ್ಯಗಳ ಟಿ–20 ಸರಣಿಯಲ್ಲಿ 2–0 ಮುನ್ನಡೆ ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು.
ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಧೋನಿ – ಸಾಕ್ಷಿ ದಂಪತಿ ಕಳೆದ ವಾರ ನಡೆದ ವಿಂಬಲ್ಡನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸ್ಪೇನ್‌ನ ರಫೆಲ್ ನಡಾಲ್ ಹಾಗೂ ಅಮೆರಿಕದ ಟೇಲರ್ ಫ್ರಿಟ್ಜ್ ನಡುವೆ ನಡೆದ ಕ್ವಾರ್ಟರ್‌ಫೈನಲ್ ಪಂದ್ಯವನ್ನು ವೀಕ್ಷಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.