ಬೆಂಗಳೂರು: ಭಾರತದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಯುವ ಆಲ್‌ರೌಂಡರ್ ರಚಿನ್ ರವೀಂದ್ರ ಗಳಿಸಿದ ಅಮೋಘ ಶತಕದ ಬಲದಿಂದ ನ್ಯೂಜಿಲೆಂಡ್ ತಂಡ 402 ರನ್ ಗಳಿಸಿ ಆಲೌಟ್ ಆಗಿದೆ. ಇದರೊಂದಿಗೆ 356 ರನ್‌ಗಳ ಭಾರಿ ಮುನ್ನಡೆ ಸಾಧಿಸಿದೆ.
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿತ್ತು. ಎರಡನೇ ದಿನ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆತಿಥೇಯ ತಂಡ ಹೀನಾಯ ಪ್ರದರ್ಶನ ನೀಡಿತ್ತು.
ಪ್ರವಾಸಿ ಬೌಲರ್‌ಗಳ ಶಿಸ್ತಿನ ದಾಳಿಗೆ ದಿಕ್ಕೆಟ್ಟ ಟೀಂ ಇಂಡಿಯಾ, ಕೇವಲ 46 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನಿಂಗ್ಸ್ ಆರಂಭಿಸಿದ ಟಾಮ್ ಲಥಾಮ್ ಬಳಗ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿತು.
157 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 134 ರನ್ ಗಳಿಸಿ ಮಿಂಚಿದರು. ಆರಂಭಿಕ ಬ್ಯಾಟರ್ ಡೆವೋನ್ ಕಾನ್ವೇ (91 ರನ್) ಹಾಗೂ ಕೆಳ ಕ್ರಮಾಂಕದ ಟಿಮ್ ಸೌಥಿ (65 ರನ್) ಸಹ ಅರ್ಧಶತಕ ಗಳಿಸಿದ್ದರಿಂದ, ಆತಿಥೇಯರು ಭಾರಿ ಹಿನ್ನಡೆ ಅನುಭವಿಸುವಂತಾಯಿತು.
ಭಾರತದ ಪರ ರವೀಂದ್ರ ಜಡೇಜ, ಕುಲದೀಪ್ ಯಾದವ್ ತಲಾ ಮೂರು ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಉರುಳಿಸಿದರು. ಇನ್ನೆರಡು ವಿಕೆಟ್‌ಗಳನ್ನು ಜಸ್‌ಪ್ರೀತ್ ಬೂಮ್ರಾ ಮತ್ತು ಆರ್.ಅಶ್ವಿನ್ ಹಂಚಿಕೊಂಡರು.
ಇದಕ್ಕುತ್ತರವಾಗಿ ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತ, 3 ಓವರ್‌ಗಳ ಅಂತ್ಯಕ್ಕೆ 4 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ (2) ಮತ್ತು ಯಶಸ್ವಿ ಜೈಸ್ವಾಲ್ (2) ಕ್ರೀಸ್‌ನಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.