ದುಬೈ:ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ತಂಗರಸು ನಟರಾಜನ್ ಅವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಬುಧವಾರ ದುಬೈಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಜೀವಾ ಸುರಕ್ಷಾ ಬಯೋಬಬಲ್‌ನಲ್ಲಿ ಆಟಗಾರರು ಹಾಗೂ ಸಿಬ್ಬಂದಿಯಲ್ಲಿ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆದ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ದುಬೈಯಲ್ಲಿ ನಡೆಯುತ್ತಿರುವ ಟೂರ್ನಿಯ ದ್ವೀತಿಯಾರ್ಧದ ವೇಳೆಯಲ್ಲೂ ಆಟಗಾರನಿಗೆ ಸೋಂಕು ತಗುಲಿದೆ. ಇದರಿಂದಾಗಿ ಕೋವಿಡ್ ಕರಿನೆರಳು ಮತ್ತೆ ಆವರಿಸಿದೆ.
ಟಿ. ನಟರಾಜನ್‌ಗೆ ಕೋವಿಡ್ ಸೋಂಕು ತಗುಲಿದ್ದು, ಪ್ರತ್ಯೇಕವಾಸದಲ್ಲಿದ್ದಾರೆ. ಅವರಲ್ಲಿ ರೋಗಲಕ್ಷಣಗಳು ಕಂಡುಬಂದಿಲ್ಲ. ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಆರು ಮಂದಿಯನ್ನು ಪ್ರತ್ಯೇಕ ವಾಸದಲ್ಲಿರುವಂತೆ ಸೂಚಿಸಲಾಗಿದೆ. ಸಹ ಆಟಗಾರ ವಿಜಯ್ ಶಂಕರ್, ತಂಡದ ವ್ಯವಸ್ಥಾಪಕ ವಿಜಯ್ ಕುಮಾರ್, ಫಿಸಿಯೋಥೆರಪಿಸ್ಟ್ ಶ್ಯಾಮ್ ಸುಂದರ್ ಜೆ, ವೈದ್ಯ ಅಂಜನಾ ವಣ್ಣನ್, ಲಾಜಿಸ್ಟಿಕ್ ಮ್ಯಾನೇಜರ್ ತುಷಾರ್ ಖಾಡೇಕರ್ ಹಾಗೂ ನೆಟ್ ಬೌಲರ್ ಪೆರಿಯಸಾಮಿ ಗಣೇಶನ್ ಪ್ರತ್ಯೇಕ ವಾಸದಲ್ಲಿದ್ದಾರೆ.
ಏತನ್ಮಧ್ಯೆ ಇಂದಿನ ಪಂದ್ಯ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಇತರೆಲ್ಲ ಆಟಗಾರರನ್ನು ಸ್ಥಳೀಯ ಕಾಲಮಾನ ಬೆಳಗ್ಗೆ 5 ಗಂಟೆಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ಫಲಿತಾಂಶ ವರದಿಯಾಗಿವೆ. ಹಾಗಾಗಿ ಇಂದಿನ ಪಂದ್ಯವು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.