ಅಹಮದಾಬಾದ್: ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇಗೀಗ ಅವರ ಬದಲಿಗೆ ಕೇರಳದ ಮಧ್ಯಮ ವೇಗಿ ಸಂದೀಪ್ ವಾರಿಯರ್ ಕಣಕ್ಕಿಳಿಯಲಿದ್ದಾರೆ ಎಂದು ಗುಜರಾತ್ ಟೈಟಾನ್ಸ್ ಫ್ರಾಂಚೈಸ್ ತಿಳಿಸಿದೆ.
32 ವರ್ಷದ ವಾರಿಯರ್ ಅವರು ಇದುವರೆಗೆ ಐದು ಐಪಿಎಲ್ ಪಂದ್ಯಗಳನ್ನು ಆಡಿದ್ದು, ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ.
ಎಡಗಾಲಿನ ಪಾದದ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಮೊಹಮ್ಮದ್ ಶಮಿ ಅವರು ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿ ವೇಳೆಗೆ ತಂಡಕ್ಕೆ ಮರಳುವ ಸಾಧ್ಯತೆ ಇದೆ.
ಶಮಿ ಅವರು ಇದೇ 22ರಂದು ಆರಂಭವಾಗುವ ಐಪಿಎಲ್ ಟೂರ್ನಿಗೆ ಅಲಭ್ಯರಾಗಿದ್ದಾರೆ. ಜೂನ್‌ನಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದಲೂ ಅವರು ಬಹುತೇಕ ಹೊರಗುಳಿಯುವ ಸಾಧ್ಯತೆ ಇದೆ.
ಶಮಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ ಮೂರು ತಿಂಗಳು ಹಿಡಿಯಲಿದೆ. ಕಳೆದ ನವೆಂಬರ್ 19 ರಂದು ಆಸ್ಟ್ರೇಲಿಯಾ ವಿರುದ್ಧ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಕೊನೆಯ ಬಾರಿಗೆ ಅವರು ಭಾರತ ತಂಡದಲ್ಲಿ ಆಡಿದ್ದರು. ವಿಶ್ವಕಪ್‌ನಲ್ಲಿ 24 ವಿಕೆಟ್ ಪಡೆದಿದ್ದರು.
ಮಾರ್ಚ್ 24ರಂದು ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಾಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.