ಅಬುಧಾಬಿ: ಐಪಿಎಲ್ ಟೂರ್ನಿಯ ಎರಡನೇ ಹಂತದ ಮೊದಲ ಮೂರೂ ಪಂದ್ಯಗಳಲ್ಲಿ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನಾವು ಆಟವಾಡಿಲ್ಲ ಎಂದು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಆರು ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.
ಪಂದ್ಯದ ಬಳಿಕ ಮಾತನಾಡಿದ ರೋಹಿತ್, ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನಾವು ಆಟವಾಡಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಇದು ದೀರ್ಘವಾದ ಟೂರ್ನಿ. ನಾವು ನಮ್ಮ ಯೋಜನೆಗಳಿಗೆ ಬದ್ಧರಾಗಿರುವುದರ ಜತೆಗೆ ಪರಿಸ್ಥಿತಿಗೆ ತಕ್ಕಂತೆ ಆಟವಾಡಬೇಕಾದದ್ದು ಮುಖ್ಯ. ಇದರಿಂದ ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕಳೆದ ಕೆಲವು ಪಂದ್ಯಗಳಲ್ಲಿ ವಿಫಲರಾಗಿದ್ದ ಹಾರ್ದಿಕ್ ಪಾಂಡ್ಯ ಮಂಗಳವಾರದ ಪಂದ್ಯದಲ್ಲಿ 30 ಎಸೆತಗಳಲ್ಲಿ 40 ರನ್ ಗಳಿಸಿ ಅಜೇಯರಾಗಿ ಉಳಿದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದನ್ನು ರೋಹಿತ್ ಶ್ಲಾಘಿಸಿದ್ದಾರೆ.
‘ಅವರು (ಹಾರ್ದಿಕ್) ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ರೀತಿ ತಂಡದ ದೃಷ್ಟಿಕೋನದಿಂದ ಬಹಳ ಮುಖ್ಯದ್ದಾಗಿದೆ. ಗಾಯದಿಂದಾಗಿ ಹೊರಗುಳಿದಿದ್ದ ಅವರು ವಾಪಸಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಲಯಕ್ಕೆ ಮರಳುವುದು ಅವರಿಗೆ ಮುಖ್ಯವಾಗಿತ್ತು’ ಎಂದು ರೋಹಿತ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.