ನವದೆಹಲಿ: 4 ವರ್ಷಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮುಖ್ಯಸ್ಥರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಶರತ್ ಕುಮಾರ್ ಅವರನ್ನು ಭಾರತೀಯ ಕ್ರಿಕೆಟ್ ಮಂಡಳಿಯ(ಬಿಸಿಸಿಐ) ಭ್ರಷ್ಟಾಚಾರ ನಿಗ್ರಹ ದಳದ(ಎಸಿಯು) ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.
ಉತ್ತರ ಪ್ರದೇಶದ ರಾಯ್ ಬರೇಲಿ ಮೂಲದ 68 ವರ್ಷದ ಶರತ್ ಕುಮಾರ್ ಅವರ ಅಧಿಕಾರಾವಧಿ ಅಕ್ಟೋಬರ್ 1ರಿಂದ ಆರಂಭವಾಗಿದೆ. 3 ವರ್ಷದ ಅವಧಿಗೆ ಅವರನ್ನು ನೇಮಕ ಮಾಡಲಾಗಿದೆ.
ಸೆಪ್ಟೆಂಬರ್ 29ರಂದು ನಡೆದ ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರ ಹೆಸರು ಅಂತಿಮಗೊಳಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಹರಿಯಾಣ ಕೇಡರ್‌ನ 1979ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಕುಮಾರ್ ಅವರು, 2013ರಿಂದ 2017ರವರೆಗೆ ಎನ್‌ಐಎ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು ಸೇರಿದಂತೆ ವಿಶಿಷ್ಟ ವೃತ್ತಿಜೀವನವನ್ನು ಹೊಂದಿದ್ದಾರೆ.
ಎನ್‌ಐಎ ಸೇವೆ ಬಳಿಕ ಕೇಂದ್ರೀಯ ಜಾಗೃತ ಆಯೋಗದ ಕಮಿಷನರ್ ಆಗಿ ಜೂನ್ 2018ರಿಂದ ಏಪ್ರಿಲ್ 2020ರವರೆಗೆ ಸೇವೆ ಸಲ್ಲಿಸಿದ್ದಾರೆ.
ಮ್ಯಾಚ್ ಫಿಕ್ಸಿಂಗ್, ಬೆಟ್ಟಿಂಗ್ ಸೇರಿದಂತೆ ಕ್ರಿಕೆಟ್‌ನಲ್ಲಿ ಭ್ರಷ್ಟಾಚಾರದ ಮೇಲೆ ಕುಮಾರ್ ನಿಗಾ ಇಡಲಿದ್ದಾರೆ.
ಎನ್‌ಐಎ ಡಿಜಿಯಾಗಿದ್ದಾಗ ಕುಮಾರ್, ಹಲವು ಹೈಪ್ರೊಫೈಲ್ ಪ್ರಕರಣಗಳನ್ನು ನಿರ್ವಹಿಸಿದ್ದಾರೆ.
ಎನ್ಐಎ ಮೂಲಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ. ನಿಷೇಧಿತ ಜೈಶ್-ಎ-ಮೊಹಮ್ಮದ್‌ನ ಭಯೋತ್ಪಾದಕರು ಪಠಾಣ್‌ಕೋಟ್ ವಾಯುನೆಲೆ ಮೇಲೆ ನಡೆಸಿದ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ಹಲವು ಭಯೋತ್ಪಾದಕ ದಾಳಿಗಳ ತನಿಖೆಯನ್ನು ಕುಮಾರ್ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.