ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ–20 ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಅರ್ಧಶತಕ ಸಿಡಿಸುವ ಮೂಲಕ ತಂಡಬೃಹತ್ ಮೊತ್ತ ಪೇರಿಸಲು ನೆರವಾದರು.
ಆಡಿದ 28 ಎಸೆತಗಳಲ್ಲಿ 52 ರನ್ ಕಲೆ ಹಾಕಿದ್ದ ಪಂತ್, ಏಳು ಬೌಂಡರಿ ಮತ್ತು ಸಿಕ್ಸರ್ ಬಾರಿಸುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.
ಜೇಸನ್ ಹೋಲ್ಡರ್ ಎಸೆದ 19ನೇ ಓವರ್‌ನಲ್ಲಿ ಪಂತ್ ಹೆಲಿಕಾಪ್ಟರ್ ಶಾಟ್ ಆಡುವ ಮೂಲಕ ಗಮನ ಸೆಳೆದರು. ಈ ಸಂದರ್ಭದಲ್ಲಿ ವೀಕ್ಷಕ ವಿವರಣೆಗಾರರು ಟೀಮ್ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿಯವರನ್ನು ನೆನಪಿಸಿಕೊಂಡು ‘ಇದು ಧೋನಿಯವರ ಛಾಯೆಗಳು’ ಎಂದು ವರ್ಣಿಸಿದರು.
ಇದೀಗ ವಿಡಿಯೊ ಸಾಮಾಜಿಕ ಜಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (52) ಮತ್ತು ವೆಂಕಟೇಶ್ ಅಯ್ಯರ್ (33) ರನ್‌ಗಳ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತ್ತು.
ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಲಯ ಕಂಡುಕೊಳ್ಳುವಲ್ಲಿ ವಿಫಲರಾದರು. ಹಾಗಾಗಿ ಭಾರತ ಆರಂಭಿಕ ಆಘಾತ ಎದುರಿಸಬೇಕಾಗಿತ್ತು.
187 ರನ್‌ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿ 8 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು.
ಈ ಮೂಲಕ ಮೂರು ಪಂದ್ಯಗಳ ಟಿ–20 ಸರಣಿಯಲ್ಲಿ ಭಾರತ 2–0 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿತು. ಇದಕ್ಕೂ ವಿಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಕ್ಲೀನ್‌ಸ್ವೀಪ್ ಸಾಧನೆ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.