ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಭಾರತ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಚಾಂಪಿಯನ್ಸ್, ನಮ್ಮ ತಂಡವು T20 ವಿಶ್ವಕಪ್ ಟ್ರೋಫಿಯನ್ನು ತವರಿಗೆ ತಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ. ಈ ಪಂದ್ಯ ಐತಿಹಾಸಿಕವಾಗಿತ್ತು ಎಂದು ಅಭಿನಂದನೆ ಸಲ್ಲಿಸಿದ್ದಾರೆ.
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಪಂದ್ಯಗಳ ಕಷ್ಟಕರ ಸಂದರ್ಭಗಳಲ್ಲಿ ತಂಡ ಉತ್ಸಾಹ ಕಳೆದುಕೊಳ್ಳದೆ, ಪಂದ್ಯಾವಳಿಯ ಉದ್ದಕ್ಕೂ ಅತ್ಯುತ್ತಮ ಕೌಶಲ್ಯಗಳನ್ನು ಪ್ರದರ್ಶಿಸಿ, ಅಂತಿಮ ಪಂದ್ಯದಲ್ಲಿ ಅಸಾಮಾನ್ಯ ಗೆಲುವು ಸಾಧಿಸಿದೆ. ಟೀಂ ಇಂಡಿಯಾ! ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದಿಸಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು. ಸೂರ್ಯಕುಮಾರ್, ಎಂತಹ ಅದ್ಭುತ ಕ್ಯಾಚ್!, ರೋಹಿತ್, ಈ ಗೆಲುವು ನಿಮ್ಮ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ರಾಹುಲ್ ದ್ರಾವಿಡ್, ಟೀಂ ಇಂಡಿಯಾಗೆ ನಿಮ್ಮ ಮಾರ್ಗದರ್ಶನದ ಕೊರತೆ ಕಾಡಲಿದೆ ಎಂದು ನನಗೆ ತಿಳಿದಿದೆ. ಮೆನ್ ಇನ್ ಬ್ಲೂ ನಮ್ಮ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
‘ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗಿ ಉಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ. ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚವಂತಹದು. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೋಷ ವ್ಯಕ್ತಪಡಿಸಿದ್ದಾರೆ.
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಭಿನಂದನೆ ಸಲ್ಲಿಸಿದ್ದಾರೆ.
17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಭಾರತ ತಂಡಕ್ಕೆ ಅಭಿನಂದನೆಗಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.