ನವದೆಹಲಿ: ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅವರಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಕಾರಣ ತಂಡದ ನಾಲ್ವರು ನೆರವು ಸಿಬ್ಬಂದಿಯನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
‘ಮುಖ್ಯ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಬಿ.ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್, ಫಿಸಿಯೊಥೆರಪಿಸ್ಟ್ ನಿತಿನ್ ಪಟೇಲ್ ಅವರನ್ನು ವೈದ್ಯಕೀಯ ತಂಡವು ಪ್ರತ್ಯೇಕ ವಾಸದಲ್ಲಿರಿಸಿದೆ’ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಪ್ರತ್ಯೇಕವಾಸದಲ್ಲಿರುವವರು ಆರ್‌ಟಿ–ಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದು ಹೋಟೆಲ್‌ನಲ್ಲಿಯೇ ಇರಲಿದ್ದಾರೆ. ವೈದ್ಯಕೀಯ ತಂಡವು ಮುಂದಿನ ಸೂಚನೆ ನೀಡುವ ವರೆಗೂ ತಂಡದೊಂದಿಗೆ ಪ್ರಯಾಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ತಂಡದ ಉಳಿದ ಸದಸ್ಯರಿಗೆ ಎರಡು ಬಾರಿ ಪ್ರಾಥಮಿಕ ಪರೀಕ್ಷೆ ನಡೆಸಲಾಗಿದೆ. ಅವರೆಲ್ಲರೂ ಆರೋಗ್ಯವಾಗಿದ್ದಾರೆ. ನೆಗೆಟಿವ್ ವರದಿ ಬಂದಿರುವವರನ್ನು ನಾಲ್ಕನೇ ದಿನದಾಟದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾವು ಓವಲ್‌ನಲ್ಲಿ ಟೆಸ್ಟ್ ಪಂದ್ಯ ಆಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.