ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಆದಷ್ಟು ಬೇಗನೇ ಕೊನೆಗೊಳಿಸಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ವೇಯ್ಟ್‌ಲಿಫ್ಟರ್ ಮೀರಾಬಾಯಿ ಚಾನು ಮನವಿ ಮಾಡಿದ್ದಾರೆ.
ಮಣಿಪುರದಲ್ಲಿ ಮೇ 3ರಿಂದ ನಡೆಯುತ್ತಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಣ ಜನಾಂಗೀಯ ಹಿಂಸಾಚಾರದಲ್ಲಿ ಈವರೆಗೆ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಈ ಕುರಿತು ವಿಡಿಯೊ ಸಂದೇಶ ಹಂಚಿಕೊಂಡಿರುವ ಮೀರಾಬಾಯಿ ಚಾನು, ಆದಷ್ಟು ಬೇಗನೆ ಬಿಕ್ಕಟ್ಟು ಇತ್ಯರ್ಥಗೊಳಿಸುವಂತೆ ಮನವಿ ಮಾಡಿದ್ದಾರೆ.
ಕಳೆದ ಮೂರು ತಿಂಗಳಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಶಾಂತಿ ನೆಲೆಸಿಲ್ಲ. ಹಿಂಸಾಚಾರದಿಂದಾಗಿ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಉಂಟಾಗಿದೆ. ಅನೇಕ ಮಂದಿ ಮೃತಪಟ್ಟಿದ್ದು, ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಮತ್ತು ಶಾಂತಿ ನೆಲೆಸಲು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಮನವಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಸದ್ಯ ಅಮೆರಿಕದಲ್ಲಿರುವ ಚಾನು, ಮುಂಬರುವ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಆದರೂ ತಮ್ಮ ಹುಟ್ಟೂರಾದ ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಅತೀವ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.