ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನಕ್ಕೆ ಬಾಬರ್ ಆಜಂ ರಾಜೀನಾಮೆ ನೀಡಿದ್ದಾರೆ.
ಪಾಕಿಸ್ತಾನದ ಎಲ್ಲ ಮೂರು ಮಾದರಿಗಳ ತಂಡಗಳ (ಟೆಸ್ಟ್, ಏಕದಿನ, ಟ್ವೆಂಟಿ-20) ನಾಯಕ ಸ್ಥಾನಕ್ಕೆ ಬಾಬರ್ ಆಜಂ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಾಬರ್, '2019ರಲ್ಲಿ ನಾಯಕ ಸ್ಥಾನ ವಹಿಸಿದ್ದೆ. ಅಲ್ಲಿಂದ ಬಳಿಕ ಅನೇಕ ಏಳು-ಬೀಳುಗಳನ್ನು ಕಂಡಿದ್ದೇನೆ. ಎಲ್ಲರ ಪ್ರಯತ್ನದಿಂದಾಗಿ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ನಮ್ಮ ತಂಡವು ಅಗ್ರಸ್ಥಾನಕ್ಕೆ ಏರಿತು. ಇಂದು ನಾನು ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇದು ಅತ್ಯಂತ ಕಠಿಣವಾದ ನಿರ್ಧಾರ. ಆದರೆ ಈ ಪಯಣದಲ್ಲಿ ತಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನಾನು ಓರ್ವ ಆಟಗಾರನಾಗಿ ತಂಡದಲ್ಲಿ ಮುಂದುವರಿಯಲಿದ್ದು, ನೂತನ ಕಪ್ತಾನನಿಗೆ ಸಂಪೂರ್ಣ ಬೆಂಬಲವನ್ನು ನೀಡಲಿದ್ದೇನೆ' ಎಂದು ಹೇಳಿದ್ದಾರೆ.
ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಪಾಕಿಸ್ತಾನ ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ವಿಫಲವಾಗಿತ್ತು.
ಈ ಹಿನ್ನೆಲೆಯಲ್ಲಿ ನಾಯಕ ಬಾಬರ್ ಆಜಂ ತೀವ್ರ ಟೀಕೆಗೆ ಗುರಿಯಾಗಿದ್ದರು. ನಾಯಕ ಸ್ಥಾನದ ಒತ್ತಡವು ಬಾಬರ್ ಬ್ಯಾಟಿಂಗ್ ಮೇಲೂ ಕೆಟ್ಟ ಪರಿಣಾಮ ಬೀರಿತ್ತು. ಅಲ್ಲದೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.