‘₹15 ಸಾವಿರ ಕೋಟಿ ಭ್ರಷ್ಟಾಚಾರ’
ಬೆಂಗಳೂರು: ಕೋವಿಡ್ ಸಮಯದಲ್ಲಿ ಸುಮಾರು ₹15 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿದ್ದು, ತನಿಖಾ ಸಮಿತಿ ಆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೋವಿಡ್‌ನಿಂದ ರಾಜ್ಯದಲ್ಲಿ ಮಕ್ಕಳು, ಮಹಿಳೆಯರು ಸೇರಿ 50 ಸಾವಿರಕ್ಕೂ ಹೆಚ್ಚಿನ ಜನರು ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರ ಅಂದು ಸಕಾಲದಲ್ಲಿ ಚಿಕಿತ್ಸೆ, ಔಷಧಿ ಮತ್ತು ಪ್ರತಿಬಂಧಕ ಕ್ರಮಗಳನ್ನು ಕೈಗೊಂಡಿದ್ದರೆ ಇಷ್ಟೊಂದು ಸಾವು ಖಂಡಿತ ಸಂಭವಿಸುತ್ತಿರಲಿಲ್ಲ. ಜನ ಕೊರೊನಾ ವೈರಸ್‌ಗಿಂತ ಹೆಚ್ಚಾಗಿ ಬಿಜೆಪಿಯ ಭ್ರಷ್ಟಾಚಾರದ ವೈರಸ್‌ನಿಂದ ಮೃತಪಟ್ಟಿರು. ಈ ಸಾವಿಗೆ ಅಂದಿನ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ದೂರಿದ್ದಾರೆ. ಸಾವನ್ನೂ ಸಂಭ್ರಮಿಸುವ, ಹೆಣ ಬಿದ್ದಲ್ಲಿ ರಾಜಕೀಯದ ಬೇಳೆ ಬೇಯಿಸುವ ಬಿಜೆಪಿ ಮತ್ತು ಅದರ ನೇತೃತ್ವದ ಆಗಿನ ಸರ್ಕಾರ ಕೊರೊನಾ ಕಾಲದಲ್ಲಿಯೂ ಇದೇ ಕೆಲಸ ಮಾಡಿದೆ. ಜನರು ಸಾಯುತ್ತಿರುವಾಗ ಹಾಸಿಗೆ, ವೆಂಟಿಲೇಟರ್, ಔಷಧಿ, ಪಿಪಿಇ ಕಿಟ್, ವ್ಯಾಕ್ಸಿನ್, ಮಾಸ್ಕ್, ಸ್ಯಾನಿಟೈಸರ್ ಖರೀದಿಯಲ್ಲೂ ದುಡ್ಡು ಹೇಗೆ ಬಾಚಬಹುದು ಎನ್ನುವ ಲೆಕ್ಕದಲ್ಲಿ ತೊಡಗಿತ್ತು. ಇದು ಬಿಜೆಪಿ ನಾಯಕರ ಅಮಾನವೀಯ ನಡವಳಿಕೆ ಎಂದು ಟೀಕಿಸಿದ್ದಾರೆ. ‘ಯಡಿಯೂರಪ್ಪನವರ ಮಗ ವಿಜಯೇಂದ್ರ ತಾನೊಬ್ಬ ಸತ್ಯ ಹರಿಶ್ಚಂದ್ರನ ಮಗನಂತೆ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೂ ಆಡಳಿತದ ಸೂತ್ರ ವಿಜಯೇಂದ್ರನ ಕೈಯಲ್ಲಿಯೇ ಇತ್ತು. ಮುಖ್ಯಮಂತ್ರಿ ಸಹಿಯನ್ನು ತಾನೇ ಹಾಕುತ್ತಿದ್ದ ಎಂದು ಅವರ ಪಕ್ಷದ ನಾಯಕರೇ ಆರೋಪ ಮಾಡಿದ್ದಾರೆ. ಕೊರೊನಾ ಭ್ರಷ್ಟಾಚಾರದಲ್ಲೂ ಅವರ ಪಾಲು ಇದೆ’ ಎಂದು ಆರೋಪಿಸಿದ್ದಾರೆ.