ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

254 ನಮ್ಮ ಕ್ಲಿನಿಕ್‌ ತೆರೆಯಲು ಸ್ಥಳ ಗುರುತಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Published 13 ಜೂನ್ 2024, 19:54 IST
Last Updated 13 ಜೂನ್ 2024, 19:54 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಹೊಸದಾಗಿ 254 ‘ನಮ್ಮ ಕ್ಲಿನಿಕ್‌‘ಗಳನ್ನು ಆರಂಭಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದ್ದು, ಅಗತ್ಯ ಸ್ಥಳಗಳನ್ನು ಗುರುತಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಹೊಸದಾಗಿ ‘ನಮ್ಮ ಕ್ಲಿನಿಕ್‌’ಗಳನ್ನು ಆರಂಭಿಸುವುದಕ್ಕೆ ಸ್ಥಳ ಗುರುತಿಸಿ, 15 ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಆದೇಶಿಸಿದರು.

ಸ್ಥಳ ಗುರುತಿಸುವ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಿ, ಸಚಿವ ಸಂಪುಟದ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಸ್ಥಳ ಗುರುತಿಸುವಾಗ ಜೈಲು, ಬಸ್‌ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಿಗೇ ಆದ್ಯತೆ ನೀಡಬೇಕು. ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್‌ಗಳನ್ನು ಬಲವರ್ಧಿಸುವತ್ತಲೂ ಗಮನ ಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅನುದಾನ ಸದುಪಯೋಗಪಡಿಸಿಕೊಳ್ಳಿ’: 15ನೇ ಹಣಕಾಸು ಯೋಜನೆಯಡಿ ಬರುವ ಆರೋಗ್ಯ ಕಾರ್ಯಕ್ರಮಗಳನ್ನು ಶೀಘ್ರ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸುವಂತೆ ತಿಳಿಸಿದರು. ಈ ವಿಷಯದಲ್ಲಿ ವಿಳಂಬ ಮಾಡಿದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲು 15ನೇ ಹಣಕಾಸು ಯೋಜನೆಯಲ್ಲಿ ದೊರೆಯುವ ಅನುದಾನವನ್ನು ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್, ರಾಷ್ಟ್ರೀಯ ಆರೋಗ್ಯ ಮಿಷನ್‌ನ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT