ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೀಘ್ರದಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು: ಸಚಿವ ಅಶ್ವಿನಿ ವೈಷ್ಣವ್

ಕಂಟೋನ್ಮೆಂಟ್ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಪರಿಶೀಲಿಸಿದ ಸಚಿವ ಅಶ್ವಿನಿ ವೈಷ್ಣವ್
Published : 5 ಅಕ್ಟೋಬರ್ 2024, 18:35 IST
Last Updated : 5 ಅಕ್ಟೋಬರ್ 2024, 18:35 IST
ಫಾಲೋ ಮಾಡಿ
Comments

ಬೆಂಗಳೂರು: ಬೆಂಗಳೂರು- ಮೈಸೂರು, ಬೆಂಗಳೂರು-ತುಮಕೂರು ಮಾರ್ಗದಲ್ಲಿ ‘ನಮೋ ಭಾರತ್ ರ‍್ಯಾಪಿಡೊ ರೈಲು’ ಸಂಚಾರವನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಕಂಟೋನ್ಮೆಂಟ್ ರೈಲು ನಿಲ್ದಾಣದ ನವೀಕರಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ನಗರಗಳ ನಡುವಿನ ಸಂಪರ್ಕವನ್ನು ಅಭಿವೃದ್ಧಿಪಡಿಸಲು ಈ ಯೋಜನೆ ರೂಪಿಸಲಾಗಿದೆ. ಇದು ಒಂದು ನಗರದಿಂದ ಇನ್ನೊಂದು ನಗರಕ್ಕೆ ಅತ್ಯಂತ ವೇಗವಾಗಿ ಸಂಪರ್ಕ ಕಲ್ಪಿಸಲಿದೆ. 150ರಿಂದ200 ಕಿ.ಮೀ. ವ್ಯಾಪ್ತಿಯೊಳಗೆ ಈ ರೈಲುಗಳು ಸಂಚರಿಸಲಿವೆ. ಉದ್ಯೋಗ ಹಾಗೂ ಇತರೆ ಕೆಲಸಗಳಿಗಾಗಿ ತುಮಕೂರು, ಮೈಸೂರಿನಿಂದ ಬೆಂಗಳೂರಿಗೆ ಬರುವವರಿಗೆ ಅನುಕೂಲವಾಗಲಿದೆ’ ಎಂದು ವಿವರಿಸಿದರು.

ವಿಮಾನ ನಿಲ್ದಾಣಕ್ಕೆ ರೈಲು: 

ಬೆಂಗಳೂರು ನಗರದ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ರೈಲ್ವೆ ಇಲಾಖೆಯು ಹಲವು ಯೋಜನೆಗಳನ್ನು ರೂಪಿಸಿದೆ. ಪ್ರಸ್ತುತ ಬೆಂಗಳೂರಿನಿಂದ ದೇವನಹಳ್ಳಿಗೆ ನೈರುತ್ಯ ರೈಲು ಸಂಪರ್ಕವಿದೆ. ವಿಮಾನ ನಿಲ್ದಾಣ, ರೈಲು ನಿಲ್ದಾಣದ ನಡುವೆ ಅಂತರ ಹೆಚ್ಚಿದೆ. ಅದನ್ನು ಕಡಿಮೆಗೊಳಿಸುವುದಕ್ಕಾಗಿ ರೈಲ್ವೆ ಜಾಲವನ್ನು ವಿಮಾನ ನಿಲ್ದಾಣದ ಸಮೀಪಕ್ಕೆ ವಿಸ್ತರಿಸಲು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು  ಚಿಂತನೆ ನಡೆಸುತ್ತಿದೆ. ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

ವಂದೇ ಭಾರತ್ ಸ್ಲೀಪರ್ ರೈಲುಗಳ ಪ್ರಾಯೋಗಿಕ ಸಂಚಾರವು ಬೆಂಗಳೂರು ಹಾಗೂ ನೊಯ್ಡಾದಲ್ಲಿ ನಡೆಯುತ್ತಿದೆ. ಒಂದು ವರ್ಷ ಪ್ರಾಯೋಗಿಕ ಪರೀಕ್ಷೆ ನಡೆಸಿದ ಬಳಿಕ ವಂದೇ ಭಾರತ್ ಸ್ಲೀಪರ್ ರೈಲುಗಳ ತಯಾರಿಕೆ ಬೃಹತ್ ಪ್ರಮಾಣದಲ್ಲಿ ನಡೆಯಲಿದೆ ಎಂದರು.

ಬೆಂಗಳೂರಿನ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿದ ಭಾರತದ ಅತಿ ದೊಡ್ಡ ವರ್ತುಲ ರೈಲ್ವೆ ಯೋಜನೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುವ ಕೆಲಸ ಪ್ರಗತಿಯಲ್ಲಿದೆ. ಡಿಸೆಂಬರ್ ಅಂತ್ಯಕ್ಕೆ ಯೋಜನೆಯ ಡಿಪಿಆರ್ ಕೈ ಸೇರಲಿದೆ. ಈ ಯೋಜನೆಯು ಅಸ್ತಿತ್ವದಲ್ಲಿರುವ ಬೆಂಗಳೂರು ಉಪನಗರ ರೈಲು ಯೋಜನೆ ಮತ್ತು ‘ನಮ್ಮ ಮೆಟ್ರೊ’ಗಳಿಗೆ ಪೂರಕವಾಗಿದೆ ಎಂದು ಮಾಹಿತಿ ನೀಡಿದರು.

₹ 484.58 ಕೋಟಿ ವೆಚ್ಚದಲ್ಲಿ ನಗರದ ಕಂಟೋನ್ಮೆಂಟ್ ರೈಲು ನಿಲ್ದಾಣವನ್ನು ನವೀಕರಿಸಲಾಗುತ್ತಿದೆ. ಪ್ರಯಾಣಿಕರಿಗೆ ವಿಶ್ವ ದರ್ಜೆಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. 28,023 ಚದರ ಅಡಿಯಲ್ಲಿ ನಿಲ್ದಾಣ ನವೀಕರಣ ನಡೆಯುತ್ತಿದ್ದು, 250 ದ್ವಿಚಕ್ರ ವಾಹನ ಹಾಗೂ 250 ಕಾರುಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿವರ ನೀಡಿದರು.

ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ. ಮೋಹನ್, ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ, ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ, ವಿಭಾಗ  ಪ್ರಧಾನ ಮುಖ್ಯಸ್ಥ ಯೋಗೀಶ್ ಮೋಹನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT