ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಸೂಚನೆ

Published 23 ಜುಲೈ 2024, 16:32 IST
Last Updated 23 ಜುಲೈ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಶೀಘ್ರವೇ ನಡೆಸಬೇಕು ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚಿಸಿದ್ದಾರೆ.

ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಮುಖ್ಯ ಆಯುಕ್ತರು, ‘ಶಿಕ್ಷಣದಿಂದ ಯಾವ ಹಂತದಲ್ಲಿ ಮಕ್ಕಳು ದೂರ ಉಳಿದಿದ್ದಾರೆ, ಕಾರಣಗಳೇನು ಎಂಬ ಮಾಹಿತಿಗಳುಳ್ಳ ಸಮೀಕ್ಷೆ ನಡೆಸಿ, ಆದಷ್ಟು ಬೇಗ ವರದಿ ಸಲ್ಲಿಸಬೇಕು’ ಎಂದರು.

ನಗರದ ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಕೂಡಲೆ ಕ್ರಮ ಕೈಗೊಳ್ಳಬೇಕು. ಜೊತೆಗೆ ನಗರದಲ್ಲಿ ಪರಿಣಾಮಕಾರಿಯಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಅಭಿವೃದ್ಧಿಪಡಿಸುತ್ತಿರುವ ತಂತ್ರಾಂಶವನ್ನು ಅನಾವರಣ ಮಾಡಬೇಕು ಎಂದು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ವಿಚಾರದಲ್ಲಿ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಹೆಚ್ಚು ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಒಂದು ಬಾರಿ ತೀರುವಳಿ (ಒಟಿಎಸ್‌) ಯೋಜನೆಯಡಿ ಬರುವ ಬಾಕಿ ಆಸ್ತಿ ಸುಸ್ತಿದಾರರಿಗೆ ಕೂಡಲೆ ತೆರಿಗೆ ಪಾವತಿಸಲು ಸೂಚಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಆಸ್ತಿ ತೆರಿಗೆಯನ್ನು ಪಾವತಿಸಿಕೊಳ್ಳಬೇಕು ಎಂದರು.

ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಡಾ. ಆರ್.ಎಲ್ ದೀಪಕ್, ಸ್ನೇಹಲ್, ಕರೀಗೌಡ, ಪ್ರೀತಿ ಗೆಹ್ಲೋಟ್, ಶಿವಾನಂದ್ ಕಾಪಶಿ, ರಮೇಶ್, ರಮ್ಯಾ ಉಪಸ್ಥಿತರಿದ್ದರು.

ಡೆಂಗಿ ನಿಯಂತ್ರಣಕ್ಕೆ ಕ್ರಮ: ನಗರದಲ್ಲಿ ಪ್ರತಿನಿತ್ಯ ಸರಾಸರಿ 150 ಡೆಂಗಿ ಪ್ರಕರಣಗಳು ಕಂಡುಬರುತ್ತಿದ್ದು, ಜುಲೈ 1ರಿಂದ 22ರವರೆಗೆ 3,304 ಪ್ರಕರಣಗಳು ವರದಿಯಾಗಿವೆ. ಎಲ್ಲಾ ವಲಯಗಳಲ್ಲಿ ಡೆಂಗಿ ನಿಯಂತ್ರಣಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು  ತುಷಾರ್‌ ಗಿರಿನಾಥ್‌ ಸೂಚಿಸಿದರು.

ವಲಯ ಆಯುಕ್ತರು ಡೆಂಗಿ ನಿಯಂತ್ರಿಸಲು ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಪ್ರತಿನಿತ್ಯ ಸಭೆ ನಡೆಸಿ ಮೇಲ್ವಿಚಾರಣೆ ಮಾಡಬೇಕು. ಹೆಚ್ಚು ಪ್ರಕರಣಗಳು ಕಂಡುಬರುವ ‘ಹಾಟ್ ಸ್ಪಾಟ್’ ಸ್ಥಳಗಳಲ್ಲಿ ನಾಗರಿಕರಿಗೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಿಸಬೇಕು. ಜೊತೆಗೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಹೆಚ್ಚಾಗಿ ಫಾಗಿಂಗ್‌ ಹಾಗೂ ಔಷಧ ಸಿಂಪಡಣೆ ಮಾಡಬೇಕು ಎಂದರು.

ಆಯಾ ವಲಯದ ಹಿರಿಯ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರೀಕ್ಷೆ, ಚಿಕಿತ್ಸೆಗೆ ವಿಧಿಸುತ್ತಿರುವ ದರ ಮತ್ತು ಡೆಂಗಿ ದೃಢಪಟ್ಟ ಪ್ರಕರಣಗಳ ಸಂಖ್ಯೆ ಕುರಿತು ಪರಿಶೀಲಿಸಬೇಕು. ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಹೆಚ್ಚು ದರ ವಿಧಿಸುವ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT