ಶನಿವಾರ, 29 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ ಸಂತ್ರಸ್ತೆ ಅಪಹರಣ: ಎಸ್ಐಟಿ ಎದುರು ವಿಚಾರಣೆಗೆ ಹಾಜರಾದ ಎಚ್‌.ಡಿ.ರೇವಣ್ಣ

Published 17 ಜೂನ್ 2024, 16:09 IST
Last Updated 17 ಜೂನ್ 2024, 16:09 IST
ಅಕ್ಷರ ಗಾತ್ರ

ಬೆಂಗಳೂರು: ‘ಅತ್ಯಾಚಾರ ಸಂತ್ರಸ್ತೆ ಅಪಹರಣ’ ಪ್ರಕರಣದ ಆರೋಪಿಯಾಗಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರು ಸೋಮವಾರ ಎಸ್‌ಐಟಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

ರೇವಣ್ಣ ಅವರ ಹೇಳಿಕೆಯನ್ನು ತನಿಖಾಧಿಕಾರಿಗಳು ದಾಖಲಿಸಿಕೊಂಡರು. ಸಿಐಡಿ ಕಚೇರಿಗೆ ಬಂದ ಅವರನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎಸ್‌ಐಟಿ ಅಧಿಕಾರಿಗಳು, ರೇವಣ್ಣ ಅವರನ್ನು ಮೇ 4ರಂದು ಬಂಧಿಸಿದ್ದರು. ಮರುದಿನವೇ ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ, ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದರು. ಕಸ್ಟಡಿ ಅವಧಿ ಮುಗಿದ ಮೇಲೆ ನ್ಯಾಯಾಲಯಕ್ಕೆ ರೇವಣ್ಣ ಅವರನ್ನು ಹಾಜರು ಪಡಿಸಲಾಗಿತ್ತು. ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ರೇವಣ್ಣ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು ಸೋಮವಾರ ಮಧ್ಯಾಹ್ನ ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾದರು.

‘ರೇವಣ್ಣ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಎಸ್‌ಐಟಿ ಕಸ್ಟಡಿಯಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿಚಾರಣೆ ಸಹ ಮುಂದುವರಿದಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT