ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗಲಿ: ಚಲುವರಾಯಸ್ವಾಮಿ

Published 29 ಜೂನ್ 2024, 12:23 IST
Last Updated 29 ಜೂನ್ 2024, 12:23 IST
ಅಕ್ಷರ ಗಾತ್ರ

ಬೀದರ್‌: ‘ಜಗತ್ತಿನ ಆಹಾರ ಕೊರತೆ ನೀಗಿಸಲು ರೈತರು ದುಡಿಯುತ್ತಿದ್ದಾರೆ. ಅವರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗಬೇಕು. ವೈಜ್ಞಾನಿಕ ಬೆಲೆ ನಿಗದಿಯಾಗಬೇಕು’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.

ನಗರದ ಗಾಂಧಿ ಗಂಜ್‌ನಲ್ಲಿ ಶನಿವಾರ ಜಿಲ್ಲಾ ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬೌದ್ದಿಕ ಸಾಮರ್ಥ್ಯ ಅಭಿವೃದ್ಧಿಗೆ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿದ್ದು, ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಬೇಕಿದೆ ಎಂದರು.

ರೈತರ ಹಿತಕ್ಕಾಗಿ ₹5 ಲಕ್ಷದ ವರಗೆ ಬಡ್ಡಿ ರಹಿತ ಸಾಲ, ಹಾಲಿಗೆ ಪ್ರತಿ ಲೀಟರ್‌ಗೆ ₹5 ಸಬ್ಸಿಡಿ ನೀಡಲಾಗುತ್ತಿದೆ. ನಾವು ನೀಡಿದ್ದ ಗ್ಯಾರಂಟಿ ಯೋಜನೆಗಳೆಲ್ಲ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಈ ವರ್ಷವೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೃಷಿ ಭಾಗ್ಯ ಯೋಜನೆ ಬೀದರ್ ಸೇರಿದಂತೆ ರಾಜ್ಯದಾದ್ಯಂತ ವಿಸ್ತರಿಸಲಾಗುವುದು. ಕೃಷಿಕ ಸಮಾಜವು ಸರ್ಕಾರ ಮತ್ತು ರೈತರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.

ಕೃಷಿಕ ಸಮಾಜ ರಾಜ್ಯದಲ್ಲಿ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ಉತ್ತಮ ಕೆಲಸ ಮಾಡುತ್ತಿದೆ.‌ ರಾಜ್ಯ ‌ಸರ್ಕಾರವೂ ಇದಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ₹5.54 ಕೋಟಿ, ತಾಲ್ಲೂಕು ಕಟ್ಟಡಗಳಿಗೆ ₹8.14 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ, ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಿ. ಪಾಪಣ್ಣ, ಕಾರ್ಯದರ್ಶಿ ಜಿ.ಎಸ್ ಜಯಸ್ವಾಮಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಗಾಂಧಿಗಂಜ್‌ ಮರ್ಚಂಟ್‌ ಅಸೋಸಿಯೇಶನ್‌ ಅಧ್ಯಕ್ಷ ಬಸವರಾಜ ಧನ್ನೂರ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT